ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಝಮೀರ್ ಅಹ್ಮದ್ ಶಂಕು ಸ್ಥಾಪನೆ

Update: 2019-02-21 13:42 GMT

ಬೆಂಗಳೂರು, ಫೆ.21: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ರಾಯಪುರಂ ವಾರ್ಡ್‌ನಲ್ಲಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹಳೆಯ ಹೆರಿಗೆ ಆಸ್ಪತ್ರೆ ಜಾಗದಲ್ಲಿ ಹೊಸದಾಗಿ 11 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಗುರುವಾರ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್‌ಖಾನ್ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಝಮೀರ್‌ಅಹ್ಮದ್ ಖಾನ್, ಆರು ಅಂತಸ್ತುಗಳನ್ನು ಹೊಂದಿರಲಿರುವ ಈ ನೂತನ ಕಟ್ಟದಲ್ಲಿ ನೆಲ ಮಹಡಿಯಲ್ಲಿ ವಾಹನಗಳ ನಿಲುಗಡೆ, 2 ರಿಂದ 5ನೇ ಮಹಡಿಯವರೆಗೆ ಆಸ್ಪತ್ರೆ ಹಾಗೂ 6ನೇ ಅಂತಸ್ತಿನಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ನೂತನ ಹೆರಿಗೆ ಆಸ್ಪತ್ರೆಯಲ್ಲಿ ಅತ್ಯಾಧುನಿಕವಾದ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು. ನನ್ನ ಕ್ಷೇತ್ರದಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಉತ್ತಮ ವೈದ್ಯಕೀಯ ಸೌಲಭ್ಯಕ್ಕಾಗಿ ನಗರದ ಇತರ ಕಡೆಯಲ್ಲಿ ಹೋಗಬೇಕಾದ ಪರಿಸ್ಥಿತಿಯಿದೆ. ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿ, ಈ ಹಿಂದೆ ಕೊಟ್ಟ ಮಾತಿನಂತೆ ನನ್ನ ಕ್ಷೇತ್ರದಲ್ಲಿ ಹೊಸ ಹೆರಿಗೆ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.
ಆಸ್ಪತ್ರೆ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಕಾಮಗಾರಿಯಲ್ಲಿ ಯಾವುದಾದರೂ ಲೋಪಗಳು ಕಂಡು ಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ಝಮೀರ್‌ಅಹ್ಮದ್‌ಖಾನ್ ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ರಾಯಪುರಂ ವಾರ್ಡ್ ಬಿಬಿಎಂಪಿ ಸದಸ್ಯೆ ಶಶಿಕಲಾ, ಬಿಜೆಪಿ ಮುಖಂಡ ಕೇಶವ್, ಕಾಂಗ್ರೆಸ್ ಮುಖಂಡರಾದ ಹಿದಾಯತುಲ್ಲಾ, ರವಿಪ್ರಸಾದ್, ರಿಝ್ವೆನ್ ಖಾನ್, ಶೇಕ್ ಬಾಬಾ, ಅಫ್ಝಲ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News