ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಶಾಸಕ ವಿ.ಸುನೀಲ್‌ ಕುಮಾರ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2019-02-21 16:25 GMT

ಬೆಂಗಳೂರು, ಫೆ.21: 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಪಾಲ್ಗೊಂಡವರಿಗಾಗಿ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಮಾಡಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶಾಸಕ ಸುನೀಲ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಮಾನ್ಯ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ವಜಾಗೊಳಿಸಿ ಆದೇಶಿಸಿತು. ಅದರಂತೆ ಶಾಸಕರ ವಿರುದ್ಧ ಕಾರ್ಕಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ರದ್ದುಗೊಂಡಂತಾಗಿದೆ.

ಅರ್ಜಿದಾರರು ಆಯೋಜಿಸಿದ್ದ ಚುನಾವಣಾ ರ್ಯಾಲಿಗೂ ದೇವಸ್ಥಾನದಲ್ಲಿ ಮಾಡಲಾಗಿದ್ದ ಊಟದ ವ್ಯವಸ್ಥೆಗೂ ಯಾವುದೇ ಸಂಬಂಧವಿಲ್ಲ. ಅಷ್ಟಕ್ಕೂ ಸಾಮಾನ್ಯವಾಗಿ ಎಲ್ಲ ಸಂದರ್ಭಗಳಲ್ಲೂ ಮತ್ತು ವಿಶೇಷ ಪೂಜೆ ನಡೆಯುವ ವೇಳೆ ಶ್ರೀರಾಮ ಭಜನಾ ಮಂದಿರ ಹಾಗೂ ವೇಣುಗೋಪಾಲಸ್ವಾಮಿ ದೇವಸ್ಥಾನಗಳಲ್ಲಿ ಭಕ್ತರಿಗೆ ಭೋಜನ ಪ್ರಸಾದ (ಅನ್ನಸಂತರ್ಪಣ) ವ್ಯವಸ್ಥೆ ಮಾಡಲಾಗಿರುತ್ತದೆ. ಇದು ದೇವಸ್ಥಾನದಲ್ಲಿ ಪರಂಪರಾಗತವಾಗಿ ನಡೆದುಕೊಂಡು ಬರುತ್ತಿದೆ. ಯಾರೇ ಭಕ್ತರು ಅಥವಾ ಸಾಮಾನ್ಯ ಜನರು ದೇವಸ್ಥಾನಕ್ಕೆ ಭೇಟಿ ಕೊಟ್ಟರೆ ಅವರು ಪ್ರಸಾದ ಸ್ವೀಕರಿಸುವುದು ರೂಢಿಗತ. ಆದರೆ, ರಾಜಕೀಯ ದುರದ್ದೇಶದಿಂದ ಅದನ್ನು ಅರ್ಜಿದಾರರು ಮತ್ತು ಚುನಾವಣೆಗೆ ತಳಕು ಹಾಕಲಾಗಿದೆ.

ಅಲ್ಲದೇ ಧಾರ್ಮಿಕ ಸಂಸ್ಥೆಗಳು ಅವುಗಳ ವ್ಯಾಪ್ತಿಯಲ್ಲಿ ಭೋಜನ ವ್ಯವಸ್ಥೆ ಮಾಡುವುದು ಸಾಂಪ್ರದಾಯಿಕ ಆಚರಣೆ, ಅದು ಆಮಿಷದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ 2011 ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ. ಹಾಗೆಯೇ ಚುನಾವಣಾ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡುವುದು ನೀತಿ ಸಂಹಿತೆಯ ಉಲ್ಲಂಘನೆ ಆಗುವುದಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅಧಿಕಾರದ ದುರ್ಬಳಕೆ ಆಗಿದೆ. ಅದೇ ರೀತಿ ಸುಪ್ರೀಂಕೋರ್ಟ್‌ನ ನಿರ್ದೇಶನ ಮತ್ತು ವಿವಿಧ ಪ್ರಕರಣಗಳಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪುಗಳ ಉಲ್ಲಂಘನೆಯಾಗಿದೆ. ಹೀಗಾಗಿ, ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣವೇನು: 2018ರ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ. ಸುನೀಲ್‌ಕುಮಾರ್ ಅವರು 2018ರ ಎ.23ರಂದು ಕಾರ್ಕಳ ಪಟ್ಟಣದಲ್ಲಿ ಚುನಾವಣಾ ರ್ಯಾಲಿ ನಡೆಸಲು ತಹಶೀಲ್ದಾರರಿಂದ ಅನುಮತಿ ಪಡೆದ್ದರು. ಆದರೆ, ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಶ್ರೀರಾಮ ಭಜನಾ ಮಂದಿರ, ವೇಣುಗೋಪಾಲಸ್ವಾಮಿ ದೇವಸ್ಥಾನ ಹಾಗೂ ಲಕ್ಷ್ಮೀ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ ಧಾರ್ಮಿಕ ಸ್ಥಳಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕೆ. ದೇವದಾಸ್ ಹೆಗ್ಡೆ ಎಂಬುವರು ಮೂರು ಪ್ರತ್ಯೇಕ ದೂರುಗಳನ್ನು ನೀಡಿದ್ದರು. ಅದನ್ನು ಆಧರಿಸಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಎ.29ರಂದು ಎಫ್‌ಐಆರ್ ದಾಖಲಿಸಲಾಗಿತ್ತು. ಅದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್‌ನಲ್ಲಿ ಅರ್ಜಿದಾರರ ಪರ ಎಂ. ವಿನೋದ್ ಕುಮಾರ್ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News