ಮಾ.22ರಿಂದ ಬಾಬಾಬುಡನ್‍ ಗಿರಿಯಲ್ಲಿ ಉರೂಸ್: ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

Update: 2019-02-22 19:07 GMT

ಚಿಕ್ಕಮಗಳೂರು, ಫೆ.22: ಮೂರು ದಿನಗಳ ಕಾಲ ನಡೆಯುವ ಉರುಸ್ ಆಚರಣೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಉರೂಸ್ ಆಚರಣೆ ಸಂಬಂಧ ಕೈಗೊಳ್ಳಬೇಕಾದ ವ್ಯವಸ್ಥೆಗಳ ಕುರಿತು ಕರೆಯಲಾಗಿದ್ದ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದ ಅವರು, ಮಾ.22ರಿಂದ ಮಾರ್ಚ್ 24 ರವರೆಗೆ ಉರೂಸ್ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಪೊಲೀಸ್ ಬಂದೋಬಸ್ತ್ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ, ರಸ್ತೆಗಳನ್ನು ದುರಸ್ಥಿಪಡಿಸುವಂತೆ ಲೋಕೋಪಯೋಗಿ ಇಲಾಖೆ, ಮಾಣಿಕ್ಯದಾರ ಹಾಗೂ ಗಾಳಿಕೆರೆಗೆ ತೆರಳುವ ರಸ್ತೆ ದುರಸ್ಥಿಪಡಿಸುವಂತೆ ಪಂಚಾಯತ್ ರಾಜ್ ಇಂಜಿನಿಯರ್ ಗಳಿಗೆ ಸೂಚಿಸಿದರು.

ಭಕ್ತರ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಲಾಗುವುದು, ತಾತ್ಕಾಲಿಕ ಆಸ್ಪತ್ರೆ ತೆರೆಯಲು ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಉರೂಸ್‍ಗೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡುವಂತೆ ಹಾಗೂ 15 ದಿನಗಳ ಕಾಲ ಭಕ್ತರಿಗೆ ಗಂಜಿ ವಿತರಿಸುವಂತೆ ಮುಜರಾಯಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿಗೆ ತಿಳಿಸಿದರು. ಸಂಸ್ಥೆಯ ಸುತ್ತಮುತ್ತ ಸ್ವಚ್ಚತೆ ಕಾಪಾಡುವಂತೆ, ಭಕ್ತಾಧಿಗಳ ವಾಸ್ತವ್ಯಕ್ಕೆ ಮೂರು ದಿನಗಳ ಕಾಲ ತಾತ್ಕಾಲಿಕ ಶೆಡ್ ನಿರ್ಮಿಸುವಂತೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರೀಶ್‍ ಪಾಂಡೆ, ಚಿಕ್ಕಮಗಳೂರು ಉಪವಿಭಾಧಿಕಾರಿ ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News