ಮಾ.1 ರಿಂದ ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ

Update: 2019-02-23 13:00 GMT

ಶಿವಮೊಗ್ಗ, ಫೆ. 23: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರೀ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಸುರಿ ಬಸ್‍ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.

ಸಂಚಾರ ನಿಷೇಧ ಮಾರ್ಚ್ 1ರಿಂದ 31ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಯಾವುದು ಮೊದಲೋ ಅಲ್ಲಿಯವರೆಗೆ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ಕಳೆದ ಜುಲೈ 10 ಮತ್ತು 13ರಂದು ಸುರಿದ ಭಾರೀ ಮಳೆಯಿಂದಾಗಿ ಆಗುಂಬೆ ಘಾಟಿಯ 7ನೇ ಮತ್ತು 14ನೇ ತಿರುವಿನಲ್ಲಿ ಮತ್ತು ಆನೆಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿದ್ದು, ಶಾಶ್ವತ ದುರಸ್ತಿ ಕಾಮಗಾರಿಯನ್ನು ಇದೀಗ ಕೈಗೊಳ್ಳಲಾಗುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News