ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿ: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಪ್ಪಾ ಅಮರನಾಥ್
ಬೆಂಗಳೂರು, ಫೆ.24: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಮಹಿಳಾ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಪ್ಪ ಅಮರನಾಥ್ ಇಂದಿಲ್ಲಿ ಹೇಳಿದರು.
ರವಿವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಸಕ್ತರು ಸೋಮವಾರದೊಳಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಅಭ್ಯರ್ಥಿ ಪಟ್ಟಿ: ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ ರೂಪಾ ಶಶಿಧರ್, ಮಂಗಳೂರಿನಿಂದ ಮಮತಾಗಟ್ಟಿ, ವಿಜಯಪುರದಿಂದ ಕಾಂತಾನಾಯಕ್, ವೀಣಾ ಕಾಶಪ್ಪನವರ್, ಗೀತಾ ಖಂಡ್ರೆ ಸೇರಿದಂತೆ ಅನೇಕರು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡಬೇಕೆಂದು ಅವರು ಒತ್ತಾಯ ಮಾಡಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇ.33 ರಷ್ಟು ಮೀಸಲಾತಿ ನೀಡುವ ವಿಷಯಕ್ಕೆ ಬದ್ಧರಾಗಿದ್ದಾರೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಸಹ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸಬೇಕು ಎಂದು ನುಡಿದರು.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ನ ಹಾಲಿ ಸಂಸದರು ಇರುವ ಕಾರಣ, ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವ ಸಂಬಂಧ ಕಾಂಗ್ರೆಸ್ ಜೆಡಿಎಸ್ ಹಿರಿಯ ನಾಯಕರು ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಅಲ್ಲಿಯವರೆಗೂ ಈ ಸಂಬಂಧ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.
ಫೆ.26 ರಂದು ಚಲೋ ಮಂಗಳೂರು
ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಜಾರಿ ಮಾಡುವಂತೆ ಆಗ್ರಹಿಸಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಫೆ.26ಕ್ಕೆ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.