ಬೇಟಿ ಬಚಾವೋ, ಬೇಟಿ ಪಡಾವೋ ವಿಫಲ: ಎಐಸಿಸಿ ಮಹಿಳಾ ಕಾರ್ಯದರ್ಶಿ ಅಪ್ಸರಾ ರೆಡ್ಡಿ
ಬೆಂಗಳೂರು, ಫೆ.24: ಪ್ರಧಾನಿ ನರೇಂದ್ರ ಮೋದಿ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು ಸಂಪೂರ್ಣ ವಿಫಲವಾಗಿದೆ ಎಂದು ಎಐಸಿಸಿ ಮಹಿಳಾ ಕಾರ್ಯದರ್ಶಿ ಅಪ್ಸರಾರೆಡ್ಡಿ ಇಂದಿಲ್ಲಿ ಆರೋಪಿಸಿದರು.
ರವಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಹೆಣ್ಣುಮಕ್ಕಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದು ದೂರಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದು ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲರಾಗಿದ್ದಾರೆ ಎಂದು ಹೇಳಿದರು.
ಇನ್ನೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ಕಾಳಜಿ ಇದ್ದರೆ, ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಲಿ ಎಂದು ಒತ್ತಾಯಿಸಿದರು.