ಶಾಂತಿಗೊಂದು ಅವಕಾಶ ಕೊಡಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್

Update: 2019-02-25 03:52 GMT

ಇಸ್ಲಾಮಾಬಾದ್, ಫೆ. 25: ಶಾಂತಿಗೊಂದು ಅವಕಾಶ ಕೊಡಿ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.

ಕ್ರಮ ಕೈಗೊಳ್ಳಬಹುದಾದ ಗುಪ್ತಚರ ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಂಡಲ್ಲಿ ತಕ್ಷಣ ಆ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ತಮ್ಮ ಹೇಳಿಕೆಗೆ ಬದ್ಧ ಎಂದು ಮಾಜಿ ಕ್ರಿಕೆಟಿಗ ಪುನರುಚ್ಚರಿಸಿದ್ದಾರೆ.

ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, "ಕ್ರಮ ಕೈಗೊಳ್ಳಬಹುದಾದ ಗುಪ್ತಚರ ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಂಡಲ್ಲಿ ತಕ್ಷಣ ಆ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಹೇಳಿಕೆಗೆ ಪ್ರಧಾನಿ ಇಮ್ರಾನ್ ಖಾನ್ ಬದ್ಧ" ಎಂದು ಸ್ಪಷ್ಟಪಡಿಸಲಾಗಿದೆ.

ಫೆ.14ರಂದು ನಡೆದ ಉಗ್ರರ ದಾಳಿಯಲ್ಲಿ ಭಾರತದ 40 ಮಂದಿ ಸಿಆರ್‌ಪಿಎಫ್ ಯೋಧರು ಬಲಿಯಾದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ತನ್ನ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದೆ. ಜತೆಗೆ ಪುಲ್ವಾಮ ದಾಳಿಗೆ ಪ್ರತಿಯಾಗಿ ಭಾರತ ದಾಳಿ ನಡೆಸಿದರೆ ಪಾಕಿಸ್ತಾನ ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನೂ ಇಮ್ರಾನ್ ನೀಡಿದ್ದರು.

ಈ ಮಧ್ಯೆ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹ್ಮದ್ ಖುರೇಶಿ, "ಇಸ್ಲಾಮಾಬಾದ್ ಶಾಂತಿಯನ್ನು ಬಯಸುತ್ತದೆ. ಆದರೆ ಭಾರತ ಯುದ್ಧ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಉಭಯ ದೇಶಗಳ ನಡುವಿನ ಉದ್ವಿಗ್ನತೆ ಶಮನಗೊಳಿಸಲು ಪಾಕಿಸ್ತಾನ ಬದ್ಧವಾಗಿದ್ದು, ಈ ಬಗ್ಗೆ ವಿಶ್ವಸಂಸ್ಥೆಗಳು ಪತ್ರ ಬರೆಯಲಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News