ಅವಹೇಳನಕಾರಿ ಪೋಸ್ಟ್ ತಡೆಗಟ್ಟಲು ಕಠಿಣ ಕ್ರಮ: ಎಚ್.ಡಿ.ಕುಮಾರಸ್ವಾಮಿ

Update: 2019-02-25 16:04 GMT

ಬೆಂಗಳೂರು, ಫೆ.25: ದಿನೇ ದಿನೇ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗುತ್ತಿರುವ ಅವಹೇಳನಕಾರಿ ಪೋಸ್ಟ್‌ಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಸೋಮವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ‘ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ’ದಲ್ಲಿ ಭಾಗವಹಿಸಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಅಶ್ಲೀಲ ಮತ್ತು ಅಸಭ್ಯ ಫೋಟೋಗಳನ್ನು ಹಾಕಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿರುವ ಕಿಡಿಗೇಡಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲು ಹೇಳಲಾಗಿದೆ ಎಂದರು.

ಕರಾವಳಿ ಭಾಗದಲ್ಲಿನ ಕೋಮುಗಲಭೆಗಳನ್ನು ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದ ಅವರು, ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಅತ್ಯುತ್ತಮ ವ್ಯವಸ್ಥೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಬದಲಾದ ಸನ್ನಿವೇಶಗಳಲ್ಲಿ ಪೊಲೀಸ್ ಇಲಾಖೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಸರಕಾರ ಬದ್ಧ ಎಂದು ಭರವಸೆ ನೀಡಿದರು.

ಮುಂಬರುವ ಚುನಾವಣೆ ಸಂದರ್ಭದಲ್ಲಿಯೂ ಶಾಂತಿಗೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪೊಲೀಸರು ಸೈನಿಕರಿಗಿಂತ ಕಡಿಮೆ ಅಲ್ಲ. ಕೊಡಗು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮರಳು ದಂಧೆ ಕ್ರಮ: ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿಯ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂಚಾರ ವ್ಯವಸ್ಥೆ ನಿರ್ವಹಣೆಯಲ್ಲಿ ಇನ್ನಷ್ಟು ಸುಧಾರಣೆ ಅಗತ್ಯ ಮತ್ತು ಅಪರಾಧ ಸಾಬೀತಾಗಿ ಶಿಕ್ಷೆ ದೊರೆಯುವ ಪ್ರಮಾಣ ಹೆಚ್ಚಳವಾಗುವುದೂ ಅತಿ ಅಗತ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕೆಂದು ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ್, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

‘ಶೀಘ್ರ ಸಭೆ’

ವರ್ಗಾವಣೆ ನಿಯಮಗಳಿಗೆ ತಿದ್ದುಪಡಿ ತರುವ ಬಗ್ಗೆ ಹಿರಿಯ ಅಧಿಕಾರಿಗಳು, ಗೃಹ ಸಚಿವರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಅಂತೆಯೇ ಔರಾದ್ಕರ್ ವರದಿ ಜಾರಿಯ ಕುರಿತು ಸಹ ಚರ್ಚಿಸಲು ಶೀಘ್ರವೇ ಸಭೆ ಕರೆಯಲಾಗುವುದು

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News