ಮಾ.1 ರಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ರಾಜ್ಯಾದ್ಯಂತ ಸಕಲ ಸಿದ್ಧತೆ

Update: 2019-02-27 12:47 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.27: ರಾಜ್ಯಾದ್ಯಂತ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, 6.80 ಲಕ್ಷ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ಪರೀಕ್ಷೆಯನ್ನು ಅಕ್ರಮ ರಹಿತವಾಗಿ ಗೊಂದಲವಿಲ್ಲದೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಎಲ್ಲ ಜಿಲ್ಲಾಡಳಿತವು ಈಗಾಗಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಾ.1 ರಂದು ಅರ್ಥಶಾಸ್ತ್ರ ಹಾಗೂ ಭೌತಶಾಸ್ತ್ರ ಪರೀಕ್ಷೆ ನಡೆಯುವ ಮೂಲಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದ್ದು, ಮಾ.18ರಂದು ನಡೆಯುವ ಇಂಗ್ಲಿಷ್ ಪರೀಕ್ಷೆಯೊಂದಿಗೆ ಪೂರ್ಣಗೊಳ್ಳಲಿದೆ.

2018-19 ನೇ ಸಾಲಿನ ವಾರ್ಷಿಕ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ ರೆಗ್ಯೂಲರ್, ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳ ಪ್ರವೇಶ ಪತ್ರ ಆನ್‌ಲೈನ್ ಮೂಲಕವೇ ವಿತರಿಸಲಾಗಿದೆ. ಬಹುತೇಕ ಕಾಲೇಜಿನ ಪ್ರಾಂಶುಪಾಲರು ನಿಗದಿತ ಸಾಫ್ಟ್‌ವೇರ್‌ನಲ್ಲಿ ವಿದ್ಯಾರ್ಥಿಗಳ ಹೆಸರು ಮತ್ತು ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಪೊಲೀಸ್ ಹಾಗೂ ಪಿಯು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗೆಯೇ ಜಿಲ್ಲಾ ಉಪ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಜತೆಗೆ ಇಲಾಖೆಯ ನಿರ್ದೇಶಕರು ವಿಡಿಯೋ ಕಾನ್ಫರೆನ್ಸ್‌ಗಳನ್ನು ನಡೆಸಿದ್ದಾರೆ.

ಪರೀಕ್ಷಾ ಕೊಠಡಿ ಹಾಗೂ ಪರೀಕ್ಷಾ ಕೇಂದ್ರದ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗಿದೆ. ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೂ ಅಗತ್ಯ ಮಾರ್ಗಸೂಚಿಯನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆ ಸರಬರಾಜು ಪರೀಕ್ಷೆ ದಿನವೇ ಜಿಲ್ಲಾ ಖಜಾನೆಯಿಂದ ಕೇಂದ್ರಗಳಿಗೆ ತಲುಪಿಸಲಾಗುತ್ತದೆ.

ಪರೀಕ್ಷಾರ್ಥಿಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸಿಸಿ ಕ್ಯಾಮರಾ ಅವಳಡಿಕೆ ಮಾಡಲಾಗಿದೆ. ಸಿಸಿ ಕ್ಯಾಮರಾ ಇಲ್ಲದ ಕೇಂದ್ರಗಳಿಗೆ ಹೊಸದಾಗಿ ಮತ್ತು ಈಗಾಗಲೇ ಅಳವಡಿಸಲಾಗಿರುವ ಸಿಸಿ ಕ್ಯಾಮರಾದ ಕಾರ್ಯಕ್ಷಮತೆಯ ಪರಿಶೀಲನೆಯೂ ನಡೆಯುತ್ತಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ.

ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ಹಾಗೂ ಪರಿವೀಕ್ಷಕರು ಹೋಗುವ ಮೊದಲು ಮತ್ತು ಬರುವ ವಿಡಿಯೋ ರೆಕಾರ್ಡಿಂಗ್ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ನಿರೀಕ್ಷಕರು, ಪರಿವೀಕ್ಷಣಾ ದಳ ನಿಯೋಜನೆ ಜಿಲ್ಲಾ ಹಂತದಲ್ಲಿ ನಡೆಯುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆದು ಮಾಹಿತಿ ನೀಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಾಹನಗಳಿಗೆ ಜಿಪಿಆರ್‌ಎಸ್: ರಾಜ್ಯದ 1013 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಕೇಂದ್ರ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯ್ಯಲು ತಂಡದ ರಚನೆ ಪೂರ್ಣಗೊಂಡಿದೆ. ಪ್ರಶ್ನೆ ಪತ್ರಿಕೆ ಕೊಂಡೊಯ್ಯುವ ವಾಹನಕ್ಕೆ ಜಿಪಿಆರ್‌ಎಸ್ ಅಳವಡಿಕೆ ಮಾಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಅಧಿಕಾರಿಗಳು ಆ ವಾಹನವನ್ನು ಟ್ರಾಕ್ ಮಾಡುತ್ತಿರುತ್ತಾರೆ.

ಪ್ರಶ್ನೆ ಪತ್ರಿಕೆ ಕೇಂದ್ರಗಳಿಗೆ ತಲುಪಿದ ನಂತರ ಸಂದೇಶವನ್ನು ರವಾನಿಸಲಾಗುತ್ತದೆ. ವಾಹನಗಳಿಗೆ ಜಿಪಿಆರ್‌ಎಸ್ ಅಳವಡಿಸುವ ಕಾರ್ಯ ಮುಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಸುರಕ್ಷತೆಗೆ ಸಿದ್ಧತೆಯೂ ಸಂಪೂರ್ಣವಾಗಿದೆ ಎಂದು ಪಿಯುಸಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News