ಮುಲ್ಕಿ, ಕುಶಾಲನಗರ ಸೇರಿ 9 ಹೊಸ ತಾಲೂಕುಗಳ ರಚನೆಗೆ ಸಂಪುಟ ಅಸ್ತು: ಸಚಿವ ದೇಶಪಾಂಡೆ

Update: 2019-02-28 13:23 GMT

ಬೆಂಗಳೂರು, ಫೆ. 28: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಕೊಡಗು ಜಿಲ್ಲೆಯ ಕುಶಾಲನಗರ, ಪೊನ್ನಂಪೇಟೆ, ಚಿಕ್ಕಮಗಳೂರು ಜಿಲ್ಲೆಯ ಕಳಸ, ವಿಜಯಪುರ ಜಿಲ್ಲೆಯ ಅಲಮೇಲ, ಬೆಳಗಾವಿ ಜಿಲ್ಲೆಯ ಯರಗಟ್ಟಿ, ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ ಸೇರಿದಂತೆ 9 ಹೊಸ ತಾಲೂಕುಗಳನ್ನು ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನೂತನ ತಾಲೂಕುಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ಕಂದಾಯ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸಲು ಕ್ರಮ ವಹಿಸಲಾಗುವುದು ಎಂದರು.

ಫೆ.25ರ ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ 9 ಹೊಸ ತಾಲೂಕುಗಳನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ದೇಶಪಾಂಡೆ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

‘ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಕೀಯ ಸಲ್ಲ. ದೇಶದ ಸೇನೆಗೆ ಬೆಂಬಲ ಕೊಡುವುದು ನಮ್ಮ ಕರ್ತವ್ಯ. ಈ ಮಧ್ಯೆ ಹಲವು ಸುಳ್ಳು ವಿಚಾರಗಳು ಹರಿದಾಡುತ್ತಿವೆ. ಗಡಿ ಸಂರಕ್ಷಣೆ ಎಲ್ಲ ಸರಕಾರಗಳ ಹೊಣೆ. ಭದ್ರತೆ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಾಯುಸೇನೆ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ತಕ್ಷಣವೇ ಬಿಡುಗಡೆ ಮಾಡಬೇಕು’

-ಆರ್.ವಿ.ದೇಶಪಾಂಡೆ, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News