ಸರಕಾರಿ ಶಾಲೆ ಹತ್ತಿರವಿದ್ದಲ್ಲಿ ಖಾಸಗಿ ಶಾಲೆಗಳಿಗೆ ಪ್ರವೇಶ ನಿರಾಕರಣೆ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-02-28 16:48 GMT

ಬೆಂಗಳೂರು, ಫೆ.28: ನೆರೆಹೊರೆಯಲ್ಲಿ ಸರಕಾರಿ ಅಥವಾ ಅನುದಾನಿತ ಶಾಲೆಗಳು ಇದ್ದಲ್ಲಿ ಅಂತಹ ಕಡೆ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಪ್ರವೇಶ ಪಡೆಯಲು ಖಾಸಗಿ ಅನುದಾನ ರಹಿತ ಶಾಲೆಗಳನ್ನು ಪರಿಗಣಿಸುವಂತಿಲ್ಲ ಎಂದು ಹೊರಡಿಸಲಾದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಗುರುವಾರ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತಂತೆ ಶಿಕ್ಷಣ ಹಕ್ಕು ಕಾಯ್ದೆ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ (ರಿ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅಧಿಸೂಚನೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆರ್‌ಟಿಇ ಅಡಿಯಲ್ಲಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ನೆರೆಹೊರೆಯಲ್ಲಿ ಸರಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಅಂತಹ ಕಡೆ ಆರ್‌ಟಿಇಯಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು-2012ರ ನಿಯಮ 4ಕ್ಕೆ ತಿದ್ದುಪಡಿ ತಂದು ರಾಜ್ಯ ಸರಕಾರ 2019ರ ಜ.30ರಂದು ಹೊರಡಿಸಿರುವ ಅಧಿಸೂಚನೆ ಕೇಂದ್ರದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಮೂಲ ಕಾಯ್ದೆ-2009ಕ್ಕೆ ತದ್ವಿರುದ್ಧವಾಗಿದೆ. ರಾಜ್ಯ ಸರಕಾರದ ಈ ಅಧಿಸೂಚನೆಯಿಂದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಹೀಗಾಗಿ, ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಬೇಕು. ಇದೇ ವೇಳೆ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಅಧಿಸೂಚನೆಗೆ ತಡೆ ನೀಡಬೇಕು ಎಂದು ಅಜಿಯರ್ಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News