ಪ್ರತಾಪ್ ಸಿಂಹ ಮೋದಿಗಿಂತಲೂ ಮಹಾನ್ ಸುಳ್ಳುಗಾರ: ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು,ಮಾ.1: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿಗಿಂತಲೂ ಸುಳ್ಳುಗಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಕಾರ್ಯತರ ಸಭೆಯಲ್ಲಿ ಅವರು ಮಾತನಾಡಿದರು.
ಸಂಸದ ಪ್ರತಾಪ್ ಸಿಂಹ ಮಹಾನ್ ಸುಳ್ಳುಗಾರ, ಮೋದಿಗಿಂತಲೂ ಹೆಚ್ಚು ಸುಳ್ಳನ್ನು ಹೇಳುತ್ತಾನೆ. ಇವರು ಸಂಸದರಾಗಿ ಮೈಸೂರಿನಲ್ಲಿ ಸುಳ್ಳುಹೇಳುವ ಮೂಲಕ ಹಲವಾರು ಗೊಂದಲಗಳನ್ನು ಸೃಷ್ಟಿಮಾಡಿದ್ದಾರೆ. ಈ ಬಾರಿ ಆತನಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ನಾನು ಇನ್ನೂ ಮುಂದೆ ಯಾವ ಚುನಾವಣೆಗೂ ನಿಲ್ಲುವುದಿಲ್ಲ, ಆದರೆ ಸಕ್ರಿಯ ರಾಜಕಾರಣದಲ್ಲಿ ಇದ್ದು ನಿಮಗೆ ಮಾರ್ಗದರ್ಶನ ನೀಡುತ್ತೇನೆ. ಹಾಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ಅವರನ್ನು ಬಾರೀ ಬಹುಮತದೊಂದಿಗೆ ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಆ ನಿಟ್ಟಿನಲ್ಲಿ ನೀವು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.
ನಾನು ಸೋಲನ್ನು ಕಂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಬಾರಿ ಅತೀ ಹೆಚ್ಚು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಕೆಲಸ ಮಾಡಿ, ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ಪರಿಸ್ಥಿತಿ ಉದ್ಭವಿಸುವುದಿಲ್ಲ, ಆದರೂ ಪಕ್ಷದ ಕಾರ್ಯಕರ್ತರು ಜಾಗೃತೆಯಿಂದ ಇರಬೇಕು ಎಂದು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಮೂರ್ತಿ, ಕಾಂಗ್ರೆಸ್ ಮುಖಂಡರಾದ ಮೈಸೂರು ಬಸವಣ್ಣ, ಕೆ.ಎಸ್.ಶಿವರಾಮ್ ಸೇರಿದಂತೆ ಹಲವರು ಉಪಸ್ತಿತರಿದ್ದರು.