ಕಾಂಗ್ರೆಸ್ ಸೇರಿದ ಬಿಜೆಪಿಯ ಮಾಜಿ ಶಾಸಕ ತಿಪ್ಪೇಸ್ವಾಮಿ

Update: 2019-03-01 18:01 GMT

ಬೆಂಗಳೂರು, ಮಾ.1: ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮೊಳಕಾಲ್ಮೂರಿನ ಬಿಜೆಪಿಯ ಮಾಜಿ ಶಾಸಕ ತಿಪ್ಪೇಸ್ವಾಮಿಯ  ಅವರು ಕಾಂಗ್ರೆಸ್ ಸೇರ್ಪಡೆಯಾದರು.

ಮಾಜಿ ಶಾಸಕ ತಿಪ್ಪೇಸ್ವಾಮಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇನಾ ಕಾರ್ಯಾಚರಣೆಯನ್ನು ರಾಜಕೀಯಗೊಳಿಸುತ್ತಿರುವ ಬಿಜೆಪಿ, ಜನರ ಮನಸ್ಸನ್ನು ಕೆಡಿಸಿ ಚುನಾವಣೆಯಲ್ಲಿ ಹೇಗೆ ಗೆಲ್ಲಬಹುದು ಎಂಬುದರ ಕುರಿತು ಆಲೋಚಿಸುತ್ತಿದೆ ಎಂದರು.

ಚುನಾವಣೆಯಲ್ಲಿ ಗೆಲ್ಲಲು ಸುಳ್ಳು ಹೇಳುವುದು, ಜನರ ಮನಸ್ಸನ್ನು ಕೆಡಿಸುವುದು ಬಿಜೆಪಿಯವರ ಜಾಯಮಾನ. ಈಗ ಎಲ್ಲ ವಿಚಾರಗಳನ್ನು ಬಿಟ್ಟು, ಸೇನೆಯ ಕಾರ್ಯಾಚರಣೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಭಾವಿ ಮುಖಂಡರಾಗಿರುವ ಮಾಜಿ ಶಾಸಕ ತಿಪ್ಪೇಸ್ವಾಮಿ ಹಾಗೂ ಅವರ ಅಪಾರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿದೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಚಿತ್ರದುರ್ಗ ಭಾಗದಲ್ಲಿ ಇನ್ನೂ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಹಿರಿಯ ನಟಿ ಸುಮಲತಾ ಅಂಬರೀಶ್, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ಅವರಿಗೆ ಬಿಜೆಪಿ ಬೆಂಬಲ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಮೈತ್ರಿ ಆಧಾರದ ಮೇಲೆ ಯಾವ ಯಾವ ಕ್ಷೇತ್ರ, ಯಾವ ಪಕ್ಷಕ್ಕೆ ಸಿಗುತ್ತದೋ, ಅಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದರು.

ಬೆಂಗಳೂರು ಉತ್ತರ ಅಥವಾ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರನ್ನು ಕಣಕ್ಕಿಳಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಮಂಡ್ಯ ಬದಲು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸುಮಲತಾ ಅವರಿಗೆ ಸಲಹೆ ನೀಡಿದ್ದೆ. ಆದರೆ, ಈ ಸಂಬಂಧ ತೀರ್ಮಾನ ಕೈಗೊಳ್ಳುವುದು ಅವರಿಗೆ ಬಿಟ್ಟದ್ದು ಎಂದರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಮಾಜಿ ಶಾಸಕ ತಿಪ್ಪೇಸ್ವಾಮಿ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ನಾಯಕ ಶ್ರೀರಾಮುಲು ಆಣೆ ಪ್ರಮಾಣ ಮಾಡಿದ್ದರು. ಆದರೆ, ಕೊಟ್ಟ ಮಾತನ್ನು ಉಳಿಸಿಕೊಳ್ಳದೆ, ಸುಳ್ಳು ಹೇಳಿ ಚುನಾವಣೆಯಲ್ಲಿ ಸ್ಪರ್ಧಿಸಿದರು. ಇಂತಹವರನ್ನು ಹೇಗೆ ನಂಬುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದುರ್ಗ ಅಷ್ಟೇ ಅಲ್ಲ, ಬಳ್ಳಾರಿ ಜಿಲ್ಲೆಯಲ್ಲಿಯೂ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರಕಾರದ ಆಡಳಿತಾವಧಿಯು ಸುವರ್ಣ ಯುಗವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಲು ಹಲವಾರು ಕಾರಣಗಳಿವೆ. ಆ ವಿಚಾರಗಳ ಕುರಿತು ನಾನು ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗಲೂ ಭದ್ರ ನೆಲೆಯಿದೆ. ಆದುದರಿಂದಲೇ, ತಿಪ್ಪೇಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ ಮೋದಿ ಅಲೆಯ ನಡುವೆಯೂ ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅದೇ ರೀತಿ ಈ ಬಾರಿಯೂ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News