×
Ad

ಮತದಾನ ಜಾಗೃತಿ ಸಂದೇಶ ಸಾರ್ವತ್ರಿಕವಾಗಲಿ: ಸಿಂಧೂ ಬಿ. ರೂಪೇಶ್

Update: 2019-03-02 20:22 IST

ಉಡುಪಿ, ಮಾ. 2: ಉಡುಪಿ ಜಿಲ್ಲೆಯಲ್ಲಿ ಹಿಂದಿನ ಚುನಾವಣೆಗಳ ವೇಳೆ ನಡೆದ ಹೊಸಬಗೆಯ ಮತದಾರರ ಜಾಗೃತಿ ಕಾರ್ಯಕ್ರಮ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಅದರಿಂದ ಜಿಲ್ಲೆಯ ಮತದಾನದ ಪ್ರಮಾಣ ಉಳಿದ ಕೆಗಳಿಗೆ ಹೋಲಿಸಿದರೆ ಉತ್ತಮವಾಗಿದೆ. ಅದೇ ರೀತಿ ಈ ಬಾರಿಯೂ ವಿನೂತನ ಕಾರ್ಯಕ್ರಮಗಳ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದ್ದಾರೆ.

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿತ್ರಕಲಾ ಮಂದಿರ ಕಲಾ ವಿದ್ಯಾಲಯ ಉಡುಪಿ ಹಾಗೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳ ಅಂಗವಾಗಿ ನಗರದ ಅಜ್ಜರಕಾಡಿನ ಭುಜಂಗ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾದ ಒಂದು ದಿನದ ಚಿತ್ರಕಲಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಚಿತ್ರಕಲೆ ಮತ್ತು ಪೈಂಟಿಂಗ್ ಎಂಬುದು ಅತ್ಯಂತ ಶಕ್ತಿಶಾಲಿ, ಪ್ರಭಾವಿ ಮಾಧ್ಯಮವಾಗಿದ್ದು, ಇದರ ಮೂಲಕ ನಮ್ಮ ಎಲ್ಲರನ್ನೂ ಒಳಗೊಳ್ಳುವ ಹಾಗೂ ನೈತಿಕ ಮತದಾನಕ್ಕೆ ಇಂದು ಸೂಕ್ತ ಮಾಧ್ಯಮ ಎನಿಸಿದೆ. ಹೀಗಾಗಿ ಚಿತ್ರಕಲೆ ಮೂಲಕ ಜನಜಾಗೃತಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಿಂಧು ಬಿ.ರೂಪೇಶ್ ನುಡಿದರು.

ಜನವರಿಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಸುಂದರ ಶೌಚಾಲಯ ಕಾರ್ಯಕ್ರಮ ದಲ್ಲಿ ಚಿತ್ರಕಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಹೆಚ್ಚಿನ ಶೌಚಾಲಯಗಳ ಗೋಡೆಗಳ ಮೇಲೆ ಸ್ವಚ್ಚತಾ ಜಾಗೃತಿ ಕುರಿತ ಚಿತ್ರ ಬಿಡಿಸುವ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅದರಂತೆ ಚಿತ್ರಕಲೆ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಚಿತ್ರಕಲಾವಿದರು, ತಮ್ಮ ಪ್ರತಿಭೆಯ ಮೂಲಕ ಹೆಚ್ಚು ಹೆಚ್ಚು ಮತದಾನ ಜಾಗೃತಿಯನ್ನು ಮೂಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ಎರಡು ದಿನಗಳ ಮಿಂಚಿನ ನೊಂದಣಿ ಕಾರ್ಯಕ್ರಮ ನಡೆಯುತ್ತಿದ್ದು, ಇವುಗಳನ್ನು ಬಳಸಿಕೊಂಡು ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಬಾಕಿ ಇರುವವರು ತಮ್ಮ ಹೆಸರನ್ನು ನೊಂದಾ ಯಿಸಿಕೊಳ್ಳಬಹುದು. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಮತದಾರರ ಸಂಖ್ಯೆ ಹೆಚ್ಚಿಸೋಣ ಎಂದರು.

ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾ ನಿರ್ದೇಶಕ ಪುರುಷೋತ್ತಮ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಮಿತಿ ಒಕ್ಕೂಟದ ವತಿಯಿಂದ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಇವುಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ನುಡಿದರು.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿದರು. ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜು ಉಪಸ್ಥಿತರಿದ್ದ ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ವಿವಿಪ್ಯಾಟ್‌ನ ಮಹತ್ವದ ಕುರಿತು ಪ್ರಾತ್ಯಕ್ಷಿಕೆ ನಡೆಯಿತು. ಹಾಗೂ ತರಬೇತಿಯಲ್ಲಿ ಭಾಗವಹಿಸುವ ಚಿತ್ರಕಲಾವಿದರಿಗೆ ಚಿತ್ರಕಲಾ ಸಲಕರಣೆಗಳನ್ನು ವಿತರಿಸಲಾಯಿತು. ವಿಷಯ ಸಂಯೋಜಕ ನಾಗರಾಜ್, ಚಿತ್ರ ಕಲಾ ಮಂದಿರದ ನಿರ್ದೇಶಕ ಡಾ.ಯು.ಸಿ.ನಿರಂಜನ್, ಚಿತ್ರಕಲಾ ಶಿಕ್ಷಕರ ಸಂಘದ ಪ್ರಶಾಂತ್ ಉಪಸ್ಥಿತರಿದ್ದರು.

ಜಿಪಂಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಡೂರು ಗ್ರಾಪಂ ಪಿಡಿಓ ಮಹೇಶ್ ಕೆ ಕಾರ್ಯಕ್ರಮ ನಿರೂಪಿಸಿ ಹರಿಕೃಷ್ಣ ಶಿವತ್ತಾಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News