ಶಾಸಕ ಗಣೇಶ್- ಆನಂದ್ ಸಿಂಗ್ ಹೊಡೆದಾಟದ ವಿಡಿಯೋ ವೈರಲ್
ಬೆಂಗಳೂರು, ಮಾ.2: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ಪರ ವಕೀಲರು ಜಾಮೀನಿಗಾಗಿ ಶನಿವಾರ ಅರ್ಜಿ ಸಲ್ಲಿಸಿದರು.
ಜನಪ್ರತಿನಿಧಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗಣೇಶ್ ಪರ ವಕೀಲ ಸಿ.ಎಚ್. ಹನುಮಂತರಾಯ ಅರ್ಜಿ ಸಲ್ಲಿಸಿದರು.
ಅರ್ಜಿ ಸಲ್ಲಿಕೆ ಬಳಿಕ ನಡೆದ ವಿಚಾರಣೆ ವೇಳೆ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಬಿಡದಿ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.
ಈ ವೇಳೆ, ಮಾರ್ಚ್ 7 ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಆರೋಪಿ ಪರ ವಕೀಲರು ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, 10 ದಿನಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮಾ.8ಕ್ಕೆ ಮುಂದೂಡಿದರು.
ಶಾಸಕರಾದ ಆನಂದ್‌ಸಿಂಗ್, ಜೆ.ಎನ್.ಗಣೇಶ್ ಹೊಡೆದಾಡಿಕೊಂಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ ಕಂಪ್ಲಿ ಶಾಸಕ ಗಣೇಶ್ ಕೊರಳಪಟ್ಟಿಯನ್ನು ವಿಜಯನಗರ ಶಾಸಕ ಆನಂದ್ ಸಿಂಗ್ ಹಿಡಿದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.