ಸೀಟು ಹಂಚಿಕೆಯ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ: ಸಿದ್ದರಾಮಯ್ಯ

Update: 2019-03-04 13:18 GMT

ಬೆಂಗಳೂರು, ಮಾ.4: ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಜೆಡಿಎಸ್ ಮುಖಂಡರು ನಮ್ಮ ಪಕ್ಷದ ಮುಖಂಡರ ಜೊತೆ ಚರ್ಚಿಸಿದ್ದಾರೆ. ಇಂದು ಅವರು ಸ್ಪರ್ಧಿಸಲು ಬಯಸುವ ಕ್ಷೇತ್ರಗಳ ಪಟ್ಟಿಯನ್ನು ನೀಡಿದ್ದಾರೆ. ಆದರೆ, ಕ್ಷೇತ್ರಗಳ ಹಂಚಿಕೆ ಕುರಿತು ಇನ್ನೂ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ನಡೆದ ಸರಕಾರದ ಸಮನ್ವಯ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿ, ರಾಜ್ಯದಲ್ಲಿ ಬಿಜೆಪಿಯನ್ನು ಎದುರಿಸಲು ನಿರ್ಧರಿಸಿದ್ದೇವೆ. ಉಭಯ ಪಕ್ಷಗಳು ಕನಿಷ್ಠ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾ.10ರೊಳಗೆ ಸೀಟು ಹಂಚಿಕೆ ವಿಚಾರದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಜೆಡಿಎಸ್‌ಗೆ 12 ಕ್ಷೇತ್ರ ನೀಡಬೇಕೋ ಅಥವಾ 9 ಕ್ಷೇತ್ರಗಳನ್ನು ನೀಡಬೇಕೋ ಎಂಬುದರ ಕುರಿತು ವಿಸ್ತೃತ ಚರ್ಚೆಯಾಗಿದೆ. ನಮ್ಮ ಹಂತದಲ್ಲಿಯೇ ಸ್ಥಾನಗಳ ಹಂಚಿಕೆ ಇತ್ಯರ್ಥವಾಗುವ ಸಾಧ್ಯತೆಯಿದೆ. ಇಲ್ಲದಿದ್ದರೆ, ಹೈಕಮಾಂಡ್ ಮಟ್ಟದಲ್ಲಿ ನಿರ್ಣಯವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಡುವೆ ಅಂತಿಮ ಹಂತದ ಮಾತುಕತೆ ನಡೆದ ಬಳಿಕ ಉಭಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಿದ್ದೇವೆ ಎಂದು ಅವರು ತಿಳಿಸಿದರು.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಾನೀಶ್ ಅಲಿ ಮಾತನಾಡಿ, ಇಂದಿನ ಸಭೆಯಲ್ಲಿ ಸೀಟುಗಳ ಹಂಚಿಕೆ ಕುರಿತು ಚರ್ಚೆ ಮಾಡಿದ್ದೇವೆ. ಕಳೆದ ವಾರ ಸಚಿವ ಎಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದರು ಎಂದರು.

ಇವತ್ತು ನಡೆದ ಸಭೆಯಲ್ಲಿ ಉಭಯ ಪಕ್ಷಗಳ ಮುಖಂಡರ ಜೊತೆ ಕಳೆದ ವಾರ ನಡೆದ ಮಾತುಕತೆಯ ವಿಚಾರವನ್ನು ಪ್ರಸ್ತಾಪ ಮಾಡಿ ಚರ್ಚೆ ನಡೆಸಿದೆವು. ಸೀಟುಗಳ ಹಂಚಿಕೆ ಕುರಿತು ಇನ್ನು ಸ್ವಲ್ಪ ಮಟ್ಟಿನ ಚರ್ಚೆಯಾಗಬೇಕಾದ ಅಗತ್ಯವಿದೆ. ಬಿಜೆಪಿಯ ಶಕ್ತಿಯನ್ನು ಕುಂದಿಸಲು ನಮ್ಮ ಬಳಿ ಹಲವು ಸೂತ್ರಗಳಿವೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News