ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು, ಮಾ. 4: ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳು ನಷ್ಟದ ಸುಳಿಗೆ ಸಿಲುಕಿದ್ದರೂ ಸಾರ್ವಜನಿಕ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿದ್ದ ‘ಕರ್ನಾಟಕ ಮುನ್ನಡೆ ಪರಿಣತರೊಂದಿಗೆ ಸಂವಾದ’ದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸಾರಿಗೆ ಪ್ರಯಾಣ ದರ ಏರಿಕೆಗೆ ನನ್ನ ಮೇಲೆ ಒತ್ತಡವಿದೆ. ಆದರೂ, ಜನರ ಮೇಲೆ ಹೊರೆ ಹಾಕಲು ಇಚ್ಛಿಸುವುದಿಲ್ಲ. ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನಷ್ಟ ಸರಿದೂಗಿಸಲು ಒಂದು ವೇಳೆ ಬಸ್ ಪ್ರಯಾಣ ದರ ಏರಿಕೆ ಮಾಡಿದರೆ ಜನರಿಂದ ಟೀಕೆಗೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ಸೋರಿಕೆ ತಡೆಗಟ್ಟಿ ನಷ್ಟ ಸರಿದೂಗಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಪೋಷಕರ ಆಯ್ಕೆಗೆ: ಸರಕಾರಿ ಶಾಲೆಗಳಲ್ಲಿ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಬದ್ಧ ಎಂದು ಪುನರುಚ್ಚರಿಸಿದ ಕುಮಾರಸ್ವಾಮಿ, ಮಕ್ಕಳನ್ನು ಕನ್ನಡ ಅಥವಾ ಆಂಗ್ಲ ಮಾಧ್ಯಮಕ್ಕೆ ಸೇರಿಸಬೇಕೆಂಬ ಆಯ್ಕೆ ಪೋಷಕರಿಗೆ ಬಿಟ್ಟದ್ದು ಎಂದು ಹೇಳಿದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕೆಂಬ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಶಿಕ್ಷಕರಿಗೆ ತರಬೇತಿ ಮತ್ತು ಸರಕಾರಿ ಶಾಲೆಗಳ ಮೂಲಸೌಲಭ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.
‘ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಯಾವುದೇ ಸಂದರ್ಭದಲ್ಲಿಯೂ ಅವಕಾಶವಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕರಾವಳಿ ಸೇರಿ ರಾಜ್ಯದಲ್ಲಿ ಯಾವುದೇ ಸಂಘರ್ಷ ನಡೆದಿಲ್ಲ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ’ ಎಂಬುದನ್ನು ಕೇಳಲು ರೋಮಾಂಚನ ಆಗುತ್ತದೆ. ಅದೇ ರೀತಿ ರಾಜ್ಯದಲ್ಲಿ ಶಾಂತಿ ಭಂಗಕ್ಕೆ ಅವಕಾಶವಿಲ್ಲ’
-ಕುಮಾರಸ್ವಾಮಿ, ಮುಖ್ಯಮಂತ್ರಿ