ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಮಾ. 4: ರಾಜಧಾನಿ ಬೆಂಗಳೂರು ಬಿಟ್ಟರೆ ದಕ್ಷಿಣ ಕನ್ನಡ ಜಿಲ್ಲೆ ಎಲ್ಲ ದೃಷ್ಟಿಯಿಂದ ಅಭಿವೃದ್ಧಿ ಹೊಂದುತ್ತಿದೆ. ಹೀಗಾಗಿ ಮಂಗಳೂರು ನಗರವನ್ನು ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಲು ಆಸ್ಥೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಪ್ರಕಟಿಸಿದ್ದಾರೆ.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾರ್ತಾ ಇಲಾಖೆ ಏರ್ಪಡಿಸಿದ್ದ ಕರ್ನಾಟಕ ಮುನ್ನಡೆ ಪರಿಣತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಶಂಕರಲಿಂಗೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲ ದೃಷ್ಟಿಯಿಂದ ಮಂಗಳೂರು ನಗರ ಅಭಿವೃದ್ಧಿ ಹೊಂದುತ್ತಿದೆ ಎಂದರು.
ಈ ಹಿಂದೆ ತಾನು ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿಯೂ ಅಲ್ಲಿನ ಜನರಿಗೆ ಕೋಮು ಸಂಘರ್ಷದಿಂದ ದೂರವಿದ್ದು ಜಿಲ್ಲೆಯ ಅಭಿವೃದ್ಧಿ ದಿಕ್ಕಿನಲ್ಲಿ ಆಲೋಚಿಸಿ ಎಂದು ಮನವಿ ಮಾಡಿದ್ದೇನೆ ಎಂದ ಅವರು, ಮಂಗಳೂರು ನಗರದ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ನೀಡಲಿದೆ ಎಂದರು.
ಮಂಡ್ಯದಲ್ಲಿ ಇನ್ನೂ ಎರಡು ತಿಂಗಳಲ್ಲಿ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡುವ ಹೊಸ ಸಕ್ಕರೆ ಕಾರ್ಖಾನೆ ಆರಂಭಿಸಲಾಗುವುದು ಎಂದ ಅವರು, ತುಂಗಭದ್ರಾ ಜಲಾಶಯದ ಹೂಳು ತುಂಬಿರುವ ಹಿನ್ನೆಲೆಯಲ್ಲಿ ನೀರು ಸಂಗ್ರಹಕ್ಕೆ ಪರ್ಯಾಯ ಜಲಾಶಯ ನಿರ್ಮಾಣಕ್ಕೆ ಅನುಮತಿ ಕೋರಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ಶಿಕ್ಷಣ, ಸಂಸ್ಕೃತಿ, ಕೃಷಿ, ಆರೋಗ್ಯ, ಕೈಗಾರಿಕೆ, ಉದ್ಯಮ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಗಣ್ಯರ ಪ್ರಶ್ನೆಗಳಿಗೆ ಸಿಎಂ ಕುಮಾರಸ್ವಾಮಿ ಉತ್ತರಿಸಿದರು. ಹಿರಿಯ ಪತ್ರಕರ್ತ ರವೀಂದ್ರ ರೇಶ್ಮೆ ಸಂವಾದ ನಡೆಸಿಕೊಟ್ಟರು.