ಡಿಮ್ಹಾನ್ಸ್ ಸಂಸ್ಥೆಯ ಬಲವರ್ಧನೆಗೆ ಹೆಚ್ಚಿನ ನೆರವು: ಸಚಿವ ಆರ್.ವಿ.ದೇಶಪಾಂಡೆ

Update: 2019-03-05 17:19 GMT

ಧಾರವಾಡ, ಮಾ.5: ಬ್ರಿಟಿಷರ ಆಡಳಿತಾವಧಿಯಲ್ಲಿ ಸ್ಥಾಪನೆಗೊಂಡಿರುವ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯು ಐತಿಹಾಸಿಕತೆಯನ್ನು ಹೊಂದಿರುವ ರಾಜ್ಯದ ಪ್ರಮುಖ ಸಂಸ್ಥೆ. ಇದು ಉತ್ತರ ಕರ್ನಾಟಕದ ಜನರಿಗೆ, ಬಡವರಿಗೆ ಹೆಚ್ಚು ಉಪಯಕ್ತವಾಗಿದ್ದು, ಇದರ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ನೆರವು ನೀಡಲಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಮಂಗಳವಾರ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಅನುದಾನಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಪುನರ್ವಸತಿ ಕೇಂದ್ರ ಹಾಗೂ ಬೇಂದ್ರೆ ಬ್ಲಾಕ್ ಆಡಳಿತ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸುಮಾರು 4.50 ಕೋಟಿ ರೂ.ವೆಚ್ಚದ ಕಾಮಗಾರಿ ಇದಾಗಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಮತ್ತು ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಡಿಮ್ಹಾನ್ಸ್ ಸಂಸ್ಥೆಗೆ ನಿರೋ ಸರ್ಜನ್‌ರ ಕೊರತೆ ಇದೆ ಎಂದು ತಿಳಿಸಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡು ನಿರೋ ಸರ್ಜನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಡಿಮ್ಹಾನ್ಸ್ ಸಂಸ್ಥೆಗೆ ರಾಜ್ಯ ಸರಕಾರ ನೀಡಲಿದೆ ಎಂದು ಅವರು ಹೇಳಿದರು.

ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಕ್ರಮ: ಪೌರಾಡಳಿತ ಇಲಾಖೆಯಡಿ ಬರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ಕಳೆದ 15 ರಿಂದ 18 ವರ್ಷಗಳಿಂದ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೇಳಿದರು.

ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಾಗಿದೆ. ನಗರೋತ್ಥಾನ ಯೋಜನೆಗಾಗಿ ಮುಖ್ಯಮಂತ್ರಿಗಳಲ್ಲಿ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದರ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಕುಡಿಯುವ ನೀರು, ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಕುಂದಗೋಳ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆಯಿದೆ. ಈಗಾಗಲೇ 14 ಹಳ್ಳಿಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಶಾಶ್ವತ ಪರಿಹಾರಕ್ಕೆ ಕ್ರಮ ಜರುಗಿಸಲಾಗಿದೆ. ಕೆರೆಗೆ ನೀರು ತುಂಬುವ ಯೋಜನೆಯಡಿ 40 ಕೋಟಿ ರೂ.ಅನುದಾನವನ್ನು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ನೀಡಿದ್ದು, ಮುಂದಿನ ಎಂಟತ್ತು ತಿಂಗಳಲ್ಲಿ ಎಲ್ಲ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಿವಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಪ್ರಹ್ಲಾದ್ ಜೋಶಿ, ಶಾಸಕ ಅಮೃತ ದೇಸಾಯಿ, ಜಿ.ಪಂ.ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News