ಮಾ.11 ರ ಬಳಿಕ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ: ದಿನೇಶ್ ಗುಂಡೂರಾವ್

Update: 2019-03-07 14:20 GMT

ಬೆಂಗಳೂರು, ಮಾ.7: ರಾಜ್ಯದಲ್ಲಿ ಪ್ರಸ್ತುತ ಸಂಸದರಿರುವ ಹನ್ನೆರಡು ಕ್ಷೇತ್ರಗಳನ್ನು ಬಿಟ್ಟು ಉಳಿದ ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಮಾ.11 ರಂದು ದಿಲ್ಲಿಯಲ್ಲಿ ಚುನಾವಣಾ ಪರಿಶೀಲನಾ ಸಮಿತಿ ಸಭೆ ನಡೆಯಲಿದ್ದು, ಆ ಬಳಿಕ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 10 ಕಾಂಗ್ರೆಸ್ ಹಾಗೂ ಎರಡು ಜೆಡಿಎಸ್ ಸಂಸದರಿದ್ದಾರೆ. ಅದಲ್ಲದೆ, ಶಿವಮೊಗ್ಗವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ನಿರ್ಧರಿಸಿದ್ದು, ಉಳಿದ 15 ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದೆ. ಸಾಮಾಜಿಕ ನ್ಯಾಯ ನೀಡಬೇಕು ಮತ್ತು ಮಹಿಳೆಯರಿಗೂ ಟಿಕೆಟ್ ನೀಡಬೇಕು ಎಂದು ಕೇಳಿದ್ದಾರೆ. ಬೆಂಗಳೂರು ಕೇಂದ್ರ, ಹಾವೇರಿ, ಬೀದರ್‌ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಗಳು ಬಂದಿವೆ. ಈ ಸಂಬಂಧ ಚರ್ಚೆ ನಡೆದಿದ್ದು, ಹೈಕಮಾಂಡ್‌ಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಪರಿಶೀಲನಾ ಸಮಿತಿ ಬಳಿಕ, ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಎಲ್ಲ ವರ್ಗಗಳಿಗೂ ಆದ್ಯತೆ ನೀಡುತ್ತದೆ. ಇದುವರೆಗೂ ಸ್ವೀಕಾರವಾಗಿರುವ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದ್ದು, ಅಂತಿಮವಾಗಿ ಹೈಕಮಾಂಡ್ ಅದನ್ನು ತೀರ್ಮಾನ ಮಾಡಲಿದೆ ಎಂದು ಮಾಹಿತಿ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಇಲ್ಲಿನ ಪ್ರಸ್ತಾವನೆಯನ್ನು ಪರಿಶೀಲನಾ ಸಮಿತಿಗೆ ರವಾನಿಸಲು ನಿರ್ಧಾರ ಮಾಡಲಾಗಿದೆ. ಅಲ್ಲಿಂದ ಸಲಹೆ ಬಂದಲ್ಲಿ ಶಾರ್ಟ್ ಲಿಸ್ಟ್ ಮಾಡಿ ಹೈಕಮಾಂಡ್‌ಗೆ ಸಲ್ಲಿಸಲಾಗುವುದು. ಪರಿಶೀಲನಾ ಸಮಿತಿ ಸಭೆಯ ಚರ್ಚೆ ಬಳಿಕ ಕೇಂದ್ರ ಚುನಾವಣಾ ಸಮಿತಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು. ಅನಂತರ ಅಭ್ಯರ್ಥಿ ಆಯ್ಕೆ ಕುರಿತಾಗಿ ಅಂತಿಮ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ರಾಮಲಿಂಗಾರೆಡ್ಡಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News