×
Ad

ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ: ಚುನಾವಣಾ ಆಯುಕ್ತ ಸಂಜೀವ್‌ ಕುಮಾರ್

Update: 2019-03-07 20:16 IST

ಬೆಂಗಳೂರು, ಮಾ.7: ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಕಡಿಮೆಯಿದೆ. ಈ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ವಾರ್ಡ್ ಮಟ್ಟದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‌ ಕುಮಾರ್ ತಿಳಿಸಿದರು. 

ಗುರುವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಎನ್ನೆಸ್ಸೆಸ್ ಕೋಶ, ರಾಜ್ಯ ಎನ್ನೆಸ್ಸೆಸ್ ಕೋಶ ಹಾಗೂ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಸಹಯೋಗದೊಂದಿಗೆ ಆಯೋಜಿಸಿದ್ದ ಒಂದು ದಿನದ ಮತದಾನ ಜಾಗೃತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕತೆ, ಮಾಹಿತಿ ತಂತ್ರಜ್ಞಾನ ಹಾಗೂ ಸಾಕ್ಷರತೆ ಹೊಂದಿರುವ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿರುವುದು ಆತಂಕ ಮೂಡಿಸಿದೆ. ಮತದಾನದ ಪ್ರಮಾಣ ಕಡಿಮೆಯಾದಷ್ಟು ಜನವಿರೋಧಿ ಜನಪ್ರತಿನಿಧಿಗಳು ಆಯ್ಕೆಯಾಗುವ ಸಂಭವ ಹೆಚ್ಚಿರುತ್ತದೆ. ಹೀಗಾಗಿ ನಗರದ ಜನತೆ ತಪ್ಪದೆ ಮತದಾನ ಮಾಡಬೇಕೆಂದು ಅವರು ಹೇಳಿದರು.

ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ಪ್ರತಿಯೊಬ್ಬರು ಮತದಾನ ಮಾಡಬೇಕು. ನಮ್ಮ ದೇಶದಲ್ಲಿ ಶೇ.20ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮೆಟ್ಟಿಲು ಹತ್ತುತ್ತಾರೆ. ಹೀಗಾಗಿ ಇಂತಹ ವಿದ್ಯಾರ್ಥಿಗಳು ಮತದಾನದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದು ಅವರು ಆಶಿಸಿದರು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಶೇ.55ಕ್ಕಿಂತ ಕಡಿಮೆ ಮತದಾನ ಆಗಿದೆ. ರಾಜ್ಯದ ಶಕ್ತಿಕೇಂದ್ರದಲ್ಲಿಯೆ ಇಂತಹ ಪರಿಸ್ಥಿತಿಯಾದರೆ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತವನ್ನು ನಿರೀಕ್ಷಿಸಲು ಹೇಗೆ ಸಾಧ್ಯ. ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಪ್ರತಿ ವಾರ್ಡ್ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ದೇಶದ ಯಾವುದೆ ಭಾಗದ ನಿವಾಸಿ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರೆ ಹಾಗೂ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ವಾಸವಾಗಿರುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದ ವ್ಯಾಪ್ತಿಗೆ ಬರುವ ಮತಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು. ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಇನ್ನೂ ಅವಕಾಶವಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಹೇಳಿದರು.

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಜಾಫೆಟ್ ಮಾತನಾಡಿ, ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಮತಕ್ಷೇತ್ರಗಳಲ್ಲಿ ಮತದಾನದ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಹಾಗೂ ವಿಶ್ವವಿದ್ಯಾಲಯದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ನ್ನು ರಚಿಸಲಾಗುವುದು ಎಂದು ತಿಳಿಸಿದರು.

ಎನ್ನೆಸ್ಸೆಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರ್ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಪ್ರಕ್ರಿಯೆಯಲ್ಲಿ ತೊಡಗುವ ಕಾಲೇಜುಗಳಿಗೆ ವಿಶೇಷ ಬಹುಮಾನ ನೀಡಲಾಗುವುದು. ಈ ಅವಕಾಶವನ್ನು ಎಲ್ಲ ಕಾಲೇಜುಗಳು ಪಡೆಯುವಂತಾಗಲಿ ಎಂದು ಆಶಿಸಿದರು.

ವಿದ್ಯಾರ್ಥಿಗಳಿಗೆ ಮೌಲ್ಯಂಕ ಚುಣಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವುದು ಜವಾಬ್ದಾರಿಯುತ ಸಂಸ್ಥೆಗಳ ಕರ್ತವ್ಯವಾಗಿದೆ. ಹೀಗಾಗಿ ವಿಶ್ವವಿದ್ಯಾಲಯಗಳ ವತಿಯಿಂದ ಮೊದಲ ಬಾರಿಗೆ ಮತದಾನ ಮಾಡುವ ವಿದ್ಯಾರ್ಥಿಗಳಿಗೆ ವೌಲ್ಯಂಕ ಕೊಡುವ ನಿಟ್ಟಿನಲ್ಲಿ ಚಿಂತನೆ ನಡೆಸಬಹುದು. ಇದರಿಂದ ಮತದಾನದ ಪ್ರಮಾಣ ಹೆಚ್ಚಾಗುವ ಹಾಗೂ ಮತದಾನದ ಪ್ರಾಮುಖ್ಯತೆ ತಿಳಿಯಲು ಸಾಧ್ಯವಾಗುತ್ತದೆ.

-ಪ್ರೊ.ಜಾಫೆಟ್, ಕುಲಪತಿ, ಬೆಂಗಳೂರು ಕೇಂದ್ರ ವಿವಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News