×
Ad

ಮಾಜಿ ಸಚಿವ ಬಚ್ಚೇಗೌಡ ವಿರುದ್ಧದ ಎಫ್‌ಐಆರ್ ರದ್ದು: ಹೈಕೋರ್ಟ್

Update: 2019-03-07 21:25 IST

ಬೆಂಗಳೂರು, ಮಾ.7: ಕಳೆದ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ವಿರುದ್ಧ ದಾಖಲಾಗಿದ್ದ ಮೂರು ಪ್ರತ್ಯೇಕ ಎಫ್ಐಆರ್‌ಗಳನ್ನು ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿ.ಎನ್. ಬಚ್ಚೇಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ ಮಾನ್ಯ ಮಾಡಿದೆ. ಬಚ್ಚೇಗೌಡ ಪರ ವಕೀಲ ಎಂ.ಎಸ್. ಶ್ಯಾಮಸುಂದರ್ ವಾದ ಮಂಡಿಸಿ, ಅರ್ಜಿದಾರರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಖಾಸಗಿ ವ್ಯಕ್ತಿ ನೀಡಿರುವ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸುವ ಮುನ್ನ ಮ್ಯಾಜಿಸ್ಟ್ರೇಟ್‌ರಿಂದ ಅನುಮತಿಯನ್ನೂ ಪಡೆಯಲಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ನಿಯಮಗಳ ಪ್ರಕಾರ ವಿಚಕ್ಷಣಾ ದಳದ ಅಧಿಕಾರಿಗಳು ಪೊಲೀಸರಿಗೆ ದೂರು ಸಲ್ಲಿಸಬೇಕಿದೆ. ಅದರ ಆಧಾರದಲ್ಲಿ ಪೊಲೀಸರು ಮ್ಯಾಜಿಸ್ಟ್ರೇಟ್‌ರಿಂದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಬೇಕು. ಆದರೆ, ಪ್ರಕರಣದಲ್ಲಿ ಕಾನೂನು ಪಾಲನೆಯಾಗಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸಬೇಕೆಂದು ಮನವಿ ಮಾಡಿದರು. ಈ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

ಪ್ರಕರಣವೇನು: 2014ರ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಚ್ಚೇಗೌಡ ಸ್ಪರ್ಧಿಸಿದ್ದರು. ಎಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಚುನಾವಣಾ ಪ್ರಚಾರ ಮೆರವಣಿಗೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಹಾಗೂ ಮತದಾರರಿಗೆ ಹಣದ ಆಮಿಷ ಒಡ್ಡಲಾಗಿದೆ. ಈ ಮೂಲಕ ಬಿ.ಎನ್. ಬಚ್ಚೇಗೌಡ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಚಿಕ್ಕಬಳ್ಳಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿತ್ತು. ಈ ದೂರಿನ ಆಧಾರದಲ್ಲಿ ಬಚ್ಚೇಗೌಡ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News