ಸಿಎಂ ಜನತಾ ದರ್ಶನದಲ್ಲಿ ನಕಲಿ ದಾಖಲೆ ಸಲ್ಲಿಕೆ: ಇಬ್ಬರ ವಿರುದ್ಧ ದೂರು

Update: 2019-03-08 13:59 GMT

ಬೆಂಗಳೂರು, ಮಾ.8: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಡೆಸುವ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆ ನೀಡಿ ನೆರವಿಗಾಗಿ ಅರ್ಜಿ ಸಲ್ಲಿಸಿದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ.

ಚನ್ನಪ್ಪಹಾಗೂ ಸುನಂದಮ್ಮ ಎಂಬವರ ವಿರುದ್ಧ ದೂರು ದಾಖಲಾಗಿದೆ.

ಫೆಬ್ರುವರಿ 20 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನತಾದರ್ಶನದಲ್ಲಿ ಈ ಇಬ್ಬರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಒದಗಿಸುವಂತೆ ಮನವಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ಕಚೇರಿ ಸಿಬ್ಬಂದಿ ಪರಿಶೀಲಿಸಿದಾಗ ಮೇಲ್ನೋಟಕ್ಕೇ ನಕಲಿ ಎಂದು ಕಂಡು ಬಂದ ಕಾರಣ, ದಾಖಲೆಗಳ ನೈಜತೆ ಪರಿಶೀಲಿಸುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿತ್ತು. ಅಲ್ಲದೆ, ಶಾಖೆಯ ಇಬ್ಬರು ಸಿಬ್ಬಂದಿಯ ತಂಡ ರಚಿಸಿ, ವರದಿ ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ಸಿಬ್ಬಂದಿ ಫೆಬ್ರುವರಿ 26 ರಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ದಾಖಲೆಗಳು ನಕಲಿ ಎಂದು ಆಸ್ಪತ್ರೆಯ ಅಧಿಕಾರಿಗಳು ದೃಢೀಕರಿಸಿದ್ದರು.

ಈ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಯವರು ಹಾಗೂ ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News