×
Ad

ಮಾ.10ರಂದು ಉಡುಪಿಯಲ್ಲಿ ಕಾಂಗ್ರೆಸ್‌ನ ಪರಿವರ್ತನಾ ಸಮಾವೇಶ

Update: 2019-03-08 20:29 IST

ಉಡುಪಿ, ಮಾ.8: ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಲು ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಆಡಳಿತ ವೈಫಲ್ಯದೊಂದಿಗೆ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಜನತೆಯ ಮುಂದಿರಿಸಲು ಕಾಂಗ್ರೆಸ್‌ನ ಪರಿವರ್ತನಾ ಯಾತ್ರೆ ಹಾಗೂ ಉಡುಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮಾ.10ರ ರವಿವಾರ ಅಪರಾಹ್ನ 2:30ಕ್ಕೆ ಉಡುಪಿ ಕಲ್ಸಂಕದ ರಾಯಲ್ ಗಾರ್ಡನ್ಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಸಮನ್ವಯ ಸಮಿತಿಯ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದರು.

ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡೀಸ್,ವೀರಪ್ಪ ಮೊಯ್ಲಿ, ಬಿ.ಕೆ.ಹರಿಪ್ರಸಾದ್, ಸಚಿವ ಯು.ಟಿ. ಖಾದರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ ಹಾಗೂ ಜಿಲ್ಲಾ ಕಾಂಗ್ರೆಸ್‌ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿ ರುವರು ಎಂದರು.

ಜಿಲ್ಲೆಯಲ್ಲಿ 1200ಕ್ಕೂ ಅಧಿಕ ಬೂತ್‌ಗಳಿದ್ದು, ಪ್ರತಿ ಬೂತ್‌ನಿಂದಲೂ ಕನಿಷ್ಠ ಹತ್ತು ಮಂದಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 10ರಿಂದ 15ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಜಿ.ಎ.ಬಾವ ತಿಳಿಸಿದರು.

ಈ ಅಭೂತಪೂರ್ವ ಪರಿವರ್ತನಾ ಯಾತ್ರೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕ ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಎಂ.ಎ.ಗಫೂರ್, ನರಸಿಂಹ ಮೂರ್ತಿ, ದೇವಿಪ್ರಸಾದ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಭಾಸ್ಕರ ರಾವ್ ಕಿದಿಯೂರು, ಶಶಿಧರ ಶೆಟ್ಟಿ ಎರ್ಮಾಳ್, ಹರೀಶ್ ಕಿಣಿ, ಹಬೀಬ್ ಅಲಿ, ವಿಶ್ವಾಸ್ ಅಮೀನ್, ಯತೀಶ ಕರ್ಕೇರ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News