×
Ad

ಮಹಿಳಾ ದಿನಾಚರಣೆ: ಉಡುಪಿ ಡಿಸಿ, ಎಸ್ಪಿ, ಸಿಇಒರಿಂದ ಹಗ್ಗ ಜಗ್ಗಾಟ

Update: 2019-03-08 20:34 IST

ಉಡುಪಿ, ಮಾ. 8: ಉಡುಪಿ ಜಿಲ್ಲೆಯ ಆಡಳಿತದ ಚುಕ್ಕಾಣಿ ಹಿಡಿದಿರುವ ಮೂವರು ಮಹಿಳಾ ಅಧಿಕಾರಿಗಳು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಲ್ಪೆ ಬೀಚ್‌ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮಹಿಳೆಯರಿಗೆ ಏರ್ಪಡಿಸಲಾದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಇತರ ಮಹಿಳಾ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಪಾಲ್ಗೊಂಡರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ.ರೂಪೇಶ್ ಅವರು ಮಹಿಳೆಯರ ಹಗ್ಗ-ಜಗ್ಗಾಟದಲ್ಲಿ ಉತ್ಸಾಹದಿಂದ ಸ್ಪರ್ಧಿಸಿ ಜಯವನ್ನೂ ಗಳಿಸಿದರು.

ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ, ಮಹಿಳಾ ಮಂಡಳಿಗಳ ಒಕ್ಕೂಟ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಮತದಾನ ಬಗ್ಗೆ ಜಾಗೃತಿ ಮೂಡಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರೂ ಪಾಲ್ಗೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಈ ಮತದಾನದ ಹಕ್ಕನ್ನು ನೀಡಿದ್ದು, ಎಲ್ಲರೂ ಯೋಚಿಸಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.

ಕ್ರೀಡಾಕೂಟದಲ್ಲಿ ಸ್ತ್ರೀ ಶಕ್ತಿ ಸಂಘಟನೆಯ ಸದಸ್ಯರು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಮಹಿಳಾ ಸಿಬ್ಬಂದಿಗಳು ಭಾಗವಹಿಸಿದರು. ಮಹಿಳೆಯರಿಗೆ ತ್ರೋಬಾಲ್, ಹಗ್ಗ-ಜಗ್ಗಾಟ ಹಾಗೂ ಮೆಹೆಂದಿ ಮೂಲಕ ಮತದಾನ ಸಂದೇಶ ನೀಡುವ ಚಿತ್ರಣವನ್ನು ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಶಾ ಜೇಮ್ಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಎನ್. ಗೊನ್ಸಾಲ್ವಿಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News