ರಮೇಶ್ ಜಾರಕಿಹೊಳಿ-ಬಿಜೆಪಿ ಶಾಸಕ ಶಿವನಗೌಡ ನಾಯಕ್ ಭೇಟಿ: ಆಪರೇಷನ್ ಕಮಲಕ್ಕೆ ತೆರೆಮರೆಯ ಸಿದ್ಧತೆ ?

Update: 2019-03-09 14:33 GMT
ರಮೇಶ್ ಜಾರಕಿಹೊಳಿ-ಶಿವನಗೌಡ ನಾಯಕ್

ಬೆಂಗಳೂರು, ಮಾ.9: ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ದೇವದುರ್ಗದ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಶನಿವಾರ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಆಪರೇಷನ್ ಕಮಲಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ಪಕ್ಷದ ನಾಲ್ವರು ಶಾಸಕರಾದ ರಮೇಶ್ ಜಾರಕಿಹೊಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ ಹಾಗೂ ಮಹೇಶ ಕುಮಟಳ್ಳಿಯನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈಗಾಗಲೇ ದೂರು ನೀಡಿದ್ದಾರೆ.

ಈ ಬೆಳವಣಿಗೆಗಳ ನಡುವೆಯೇ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಪಾಳಯ ಸೇರಿಕೊಂಡಿದ್ದಾರೆ. ಆದರೆ, ಅವರ ರಾಜೀನಾಮೆ ಕುರಿತು ಸ್ಪೀಕರ್ ಈವರೆಗೆ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಇದೇ ವೇಳೆ ಶಿವನಗೌಡ ನಾಯಕ್, ರಮೇಶ್‌ ಜಾರಕಿಹೊಳಿಯನ್ನು ಸಂಪರ್ಕಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ದೊಡ್ಡ ಮಟ್ಟದ ಮರ್ಮಾಘಾತ ನೀಡಲು ಪ್ರತಿಪಕ್ಷ ಬಿಜೆಪಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ರಮೇಶ್ ಜಾರಕಿಹೊಳಿ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿನ ಅತೃಪ್ತ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎಂದು ತಿಳಿದು ಬಂದಿದೆ.

ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡನ ಜೊತೆ ಶಿವನಗೌಡ ನಾಯಕ್ ಆಪರೇಷನ್ ಕಮಲದ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾದ ಆಡಿಯೋ, ಕಳೆದ ತಿಂಗಳಷ್ಟೇ ಸಾಕಷ್ಟು ಚರ್ಚೆಗೊಳಗಾಗಿ, ಸದನದಲ್ಲಿಯೂ ಅಲ್ಲೋಲ ಕಲ್ಲೋಲ ಎಬ್ಬಿಸಿತ್ತು. ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಕಲೆ ಹಾಕಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇತ್ತೀಚೆಗಷ್ಟೇ ರಮೇಶ್ ಜಾರಕಿಹೊಳಿ, ನಾಗೇಂದ್ರ ಹಾಗೂ ಮಹೇಶ್ ಕಮಟಳ್ಳಿಯನ್ನು ನೇರವಾಗಿ ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿದ್ದಲ್ಲದೆ, ಮುಂದಿನ ದಿನಗಳಲ್ಲಿ ಅನ್ಯಾಯವನ್ನು ಸರಿಪಡಿಸುವ ಭರವಸೆ ನೀಡಿದ್ದರು. ಅಲ್ಲದೇ, ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ಮನವಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News