×
Ad

ಬೆಳಗಾವಿ: ಮತದಾರರ ಜಾಗೃತಿಗೆ ವಿಕಲಚೇತನರ ಬೈಕ್ ರ‍್ಯಾಲಿ

Update: 2019-03-09 23:26 IST

ಬೆಳಗಾವಿ, ಮಾ.9: ಯಾವುದೇ ಅರ್ಹ ವ್ಯಕ್ತಿಯು ಮತದಾನದ ಹಕ್ಕಿನಿಂದ ವಂಚಿತಗೊಳ್ಳಬಾರದು ಎಂಬ ಆಶಯದೊಂದಿಗೆ ಚುನಾವಣಾ ಆಯೋಗವು ವಿವಿಧ ಬಗೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಕರೆ ನೀಡಿದರು.

ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವಿಕಲಚೇತನರ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಅರ್ಹ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಈಗಲೇ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಹೊಸದಾಗಿ ಹೆಸರು ಸೇರ್ಪಡಗೆ ಈಗಲೂ ಅವಕಾಶವಿದ್ದು, ಇದರ ಪ್ರಯೋಜನ ಪಡದುಕೊಳ್ಳಬೇಕು ಎಂದು ಅವರು ಹೇಳಿದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಹಾಗೂ ಮತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿಕೊಡುತ್ತಿರುವ ವಿಕಲಚೇತನರ ಕೆಲಸ ಎಲ್ಲರಿಗೂ ಮಾದರಿಯಾಗಿದೆ. ಲೋಕಸಭೆ ಚುನಾವಣೆ ಯಾವುದೇ ಕ್ಷಣದಲ್ಲೂ ಘೋಷಣೆಯಾಗಬಹುದು. ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು. ಅಷ್ಟೇ ಅಲ್ಲದೇ ನೆರೆಹೊರೆಯವರಿಗೂ ಮತ್ತು ಯುವಜನರಿಗೂ ಮತದಾನಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಅವರು ಮನವಿ ಮಾಡಿದರು.

ನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ಮಾತನಾಡಿ, ತಮ್ಮ ಹಕ್ಕು ಚಲಾಯಿಸಲು ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಈಗಲೇ ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿ.ಪಂ.ಸಿಇಓ ಡಾ.ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪಎಚ್.ಬಿ., ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ದುಡಗುಂಟಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News