ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆಯಿಲ್ಲ: ಆಯೋಗದ ನಿರ್ಧಾರಕ್ಕೆ ವ್ಯಾಪಕ ಟೀಕೆ

Update: 2019-03-10 18:43 GMT

ಹೊಸದಿಲ್ಲಿ, ಮಾ.10: ರಾಜ್ಯಪಾಲರ ಆಡಳಿತದಲ್ಲಿರುವ ಜಮ್ಮು ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆಯ ಜೊತೆಗೇ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆಸುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಪುಲ್ವಾಮಾದಲ್ಲಿ ಭಯೋತ್ಪಾದಕರ ಆತ್ಮಾಹುತಿ ದಾಳಿಯ ಬಳಿಕ ಕಣಿವೆ ರಾಜ್ಯದ ಸ್ಥಿತಿಗತಿಯನ್ನು ಅವಲೋಕಿಸಿ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಿದ ಬಳಿಕ ಈಗ ಅಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಸಕಾಲವಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಆಯೋಗ ತಿಳಿಸಿದೆ. ಜಮ್ಮು ಕಾಶ್ಮೀರದಲ್ಲಿ ಜೂನ್‌ನಿಂದ ರಾಜ್ಯಪಾಲರ ಆಡಳಿತವಿದೆ.

ಅನಂತನಾಗ್ ಕ್ಷೇತ್ರಕ್ಕೆ ನಡೆದ ಚುನಾವಣೆಗೇ ನಾವು ಮೂರು ಹಂತದ ಮತದಾನ ಪ್ರಕ್ರಿಯೆ ನಡೆಸಬೇಕಾಯಿತು. ಅಲ್ಲಿಯ ಪರಿಸ್ಥಿತಿ ಎಷ್ಟು ಜಟಿಲವಾಗಿದೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ. ಆದರೆ ಆಯೋಗದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. 1996ರ ಬಳಿಕ ಇದೇ ಪ್ರಥಮ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸಕಾಲದಲ್ಲಿ ನಡೆಯುತ್ತಿಲ್ಲ. ಮುಂದಿನ ದಿನ ನೀವು ಪ್ರಧಾನಿ ನರೇಂದ್ರ ಮೋದಿಯ ಬಲಿಷ್ಟ ನಾಯಕತ್ವವನ್ನು ಹೊಗಳುವಾಗ ಈ ಅಂಶವನ್ನು ಜ್ಞಾಪಿಸಿಕೊಳ್ಳಿ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯ ಉಭಯ ಸದನವನ್ನುದ್ದೇಶಿಸಿ ಮಾತನಾಡಿದ್ದ ಗೃಹ ಸಚಿವ ರಾಜನಾಥ್ ಸಿಂಗ್, ಲಭ್ಯವಿರುವ ಎಲ್ಲಾ ಶಕ್ತಿಗಳನ್ನೂ ಬಳಸಿಕೊಂಡು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವುದಾಗಿ ಭರವಸೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News