ಬೆಂ.ಉತ್ತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಕಣಕ್ಕೆ? ಪಕ್ಷದ ಮುಖಂಡರ ಜೊತೆ ಸುದೀರ್ಘ ಸಭೆ
ಬೆಂಗಳೂರು, ಮಾ.11: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕ್ಷೇತ್ರದ ಪ್ರಮುಖ ಮುಖಂಡರೊಂದಿಗೆ ಸುದೀರ್ಘ ಸಭೆ ನಡೆಸಿದ್ದಾರೆ.
ಸೋಮವಾರ ನಗರದ ಜೆಡಿಎಸ್ ಕಚೇರಿ(ಜೆಪಿ ಭವನ)ಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್ ಸೇರಿದಂತೆ ಇನ್ನಿತರ ಕ್ಷೇತ್ರಗಳ ಪರಾಜಿತ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಅವರು ಚರ್ಚೆ ನಡೆಸಿದರು.
ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣರಿಗೆ ಬಿಟ್ಟು ಕೊಟ್ಟು, ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರ ಎಂದೇ ಬಿಂಬಿಸಲ್ಪಡುತ್ತಿರುವ, ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ದೇವೇಗೌಡ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವಿದ್ದು, ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ಬೆಂಗಳೂರು ಉತ್ತರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ದೇವೇಗೌಡರು ಸ್ಪರ್ಧಿಸಿದರೆ ಮಾತ್ರ ನಾವು ಬೆಂಬಲ ನೀಡುತ್ತೇವೆ ಎಂದು ಈಗಾಗಲೇ ಈ ಕ್ಷೇತ್ರದ ವ್ಯಾಪ್ತಿಗೊಳಪಡುವ ಕಾಂಗ್ರೆಸ್ ಶಾಸಕರು ತಿಳಿಸಿದ್ದಾರೆ.
ಹಾಸನದಿಂದ ಪ್ರಜ್ವಲ್ ರೇವಣ್ಣ, ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಹಾಗೂ ಶಿವಮೊಗ್ಗದಿಂದ ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಮೈತ್ರಿ ಸೂತ್ರದಂತೆ ಜೆಡಿಎಸ್‌ಗೆ 7 ರಿಂದ 8 ಸ್ಥಾನಗಳು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸುಮಲತಾ ಸ್ಪರ್ಧೆ ಬೇಡ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧಿಸುವುದು ಬೇಡ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.13ರಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು. ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದೇನೆ. ಕಾಂಗ್ರೆಸ್ ನಾಯಕರೊಂದಿಗೆ ನಾಳೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಉತ್ತರ, ತುಮಕೂರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ತೀರ್ಮಾನ ಮಾಡಿಲ್ಲ ಎಂದು ದೇವೇಗೌಡ ಹೇಳಿದರು.