ಜೆಡಿಎಸ್‌ಗೆ 7 ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ಚಿಂತನೆ ?

Update: 2019-03-11 14:48 GMT

ಹೊಸದಿಲ್ಲಿ, ಮಾ.11: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಿತ್ರ ಪಕ್ಷ ಜೆಡಿಎಸ್‌ಗೆ 7 ಸ್ಥಾನಗಳನ್ನು ಬಿಟ್ಟುಕೊಟ್ಟು, ಉಳಿದ 21 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಸೋಮವಾರ ಹೊಸದಿಲ್ಲಿಯಲ್ಲಿ ನಡೆದ ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಜೆಡಿಎಸ್‌ಗೆ ಹಾಸನ, ಮಂಡ್ಯ, ಬೆಂಗಳೂರು ಉತ್ತರ ಸೇರಿದಂತೆ 7 ಕ್ಷೇತ್ರಗಳನ್ನು ಬಿಟ್ಟುಕೊಡಬಹುದಾಗಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಕ್ಷೇತ್ರವನ್ನು ಈಗಾಗಲೇ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ. ಮೈಸೂರು-ಕೊಡಗು ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಉಳಿಸಿಕೊಳ್ಳಬೇಕು. ಮಾಜಿ ಸಂಸದ ಸಿ.ಎಚ್.ವಿಜಯಶಂಕರ್‌ಗೆ ಕಣಕ್ಕಿಳಿಸಿ, ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಬಿಗಿ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

ಜೆಡಿಎಸ್ ಬೇಡಿಕೆ ಇಟ್ಟಿರುವ ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಹಾಗೂ ಮೈಸೂರು ಕ್ಷೇತ್ರಗಳನ್ನು ಬಿಟ್ಟುಕೊಡುವ ವಿಚಾರದಲ್ಲಿ ಅಪಸ್ವರ ಎದ್ದಿದೆ. ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು ಎಂದು ಹಾಲಿ ಸಂಸದರಾದ ವೀರಪ್ಪಮೊಯ್ಲಿ ಹಾಗೂ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರದ ಬದಲು ಹೊಂದಾಣಿಕೆ ದೃಷ್ಟಿಯಿಂದ ತುಮಕೂರು ಕ್ಷೇತ್ರವನ್ನು ಬಿಟ್ಟುಕೊಡಲು ಸಭೆಯಲ್ಲಿ ಚರ್ಚೆಯಾಗಿದೆ. ಅಲ್ಲದೇ, ಅಲ್ಪಸಂಖ್ಯಾತ ಸಮುದಾಯದ ಮತಗಳು ನಿರ್ಣಾಯಕವಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ಮಾಜಿ ಸಚಿವ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಸ್ಪರ್ಧೆಯಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಬಳಿ ಉಳಿಸಿಕೊಳ್ಳಲು ಯಾವುದಾದರೂ ಮಾರ್ಗವಿದೆಯೇ ಎಂಬುದರ ಕುರಿತು ಆಲೋಚಿಸುವಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಸೇವೆಯನ್ನು ಮಾಡಿದ್ದಾರೆ. ಅವರ ಗೌರವಾರ್ಥ ಸುಮಲತಾ ಅಂಬರೀಶ್‌ರನ್ನು ಕಾಂಗ್ರೆಸ್ ಗೌರವಿಸಬೇಕು. ಮಂಡ್ಯದಲ್ಲಿ ಅವರಿಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದೆ. ಆದುದರಿಂದ, ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಬಳಿ ಉಳಿಸಿಕೊಂಡು, ಸುಮಲತಾ ಅವರಿಗೆ ಅವಕಾಶ ನೀಡಲು ಸಾಧ್ಯತೆಗಳಿವೆಯೇ ಎಂಬ ಬಗ್ಗೆ ಚಿಂತನೆ ಮಾಡಿ, ಅಭಿಪ್ರಾಯ ತಿಳಿಸಿ ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಂಸದರಾದ ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News