ಡಿ.ಕೆ ಶಿವಕುಮಾರ್ ವಿರುದ್ಧ ಹೈಕಮಾಂಡ್‌ಗೆ ದೂರು?

Update: 2019-03-11 16:13 GMT

ಬೆಂಗಳೂರು, ಮಾ.11: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಬೆಂಬಲಿಸುವಂತೆ ಸೂಚಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕರ ಸಭೆ ಕರೆದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರಮುಖ ನಾಯಕರು ಹೈಕಮಾಂಡ್‌ಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರ ಸಭೆ ಕರೆಯುವಂತೆ ಡಿ.ಕೆ.ಶಿವಕುಮಾರ್‌ಗೆ ಅನುಮತಿ ನೀಡಿದ್ದು ಯಾರು? ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತೆ? ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ಗೆ ಮುಖಂಡರು ಪ್ರಶ್ನಿಸಿದ್ದಾರೆ.

ಸಭೆಗೆ ನಾವು ಹೋದರೂ ಕಷ್ಟ, ಹೋಗದಿದ್ದರೂ ಕಷ್ಟ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸೂಚನೆಯಂತೆ ಶಿವಕುಮಾರ್ ಸಭೆ ಕರೆದು, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ನಮಗೆ ಸೂಚನೆ ನೀಡುತ್ತಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ನಾಯಕರೇ ಅಥವಾ ದೇವೇಗೌಡ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಏಜೆಂಟರೇ? ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಕ್ಷದ ಗಮನಕ್ಕೆ ತರದೇ ಒಂದು ಜಿಲ್ಲೆಯ ಮುಖಂಡರ ಸಭೆ ಕರೆದಿದ್ದು ಯಾಕೆ? ಚುನಾವಣೆಯ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಯಾವ ರೀತಿಯ ಸಂದೇಶ ನೀಡಿದಂತಾಗುತ್ತದೆ ಎಂದು ಶಿವಕುಮಾರ್ ನಡೆಯ ವಿರುದ್ಧ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News