ಚುನಾವಣೆ ನೀತಿ ಸಂಹಿತೆ ಹಿನ್ನೆಲೆ: ಬೆಂಗಳೂರಿನ ವಿವಿಧೆಡೆ ಫ್ಲೆಕ್ಸ್ ತೆರವು
ಬೆಂಗಳೂರು, ಮಾ.11: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ, ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿರುವ ಜಾಹೀರಾತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ.
ನಗರದ ಬಸ್ ನಿಲ್ದಾಣಗಳು, ಪಾದಚಾರಿ ಮೇಲ್ಸೇತುವೆಗಳು, ಕುಡಿಯುವ ನೀರಿನ ಘಟಕ, ಶೌಚಾಗೃಹಗಳ ಮೇಲೆ ಅಳವಡಿಸಲಾಗಿದ್ದ ಸರಕಾರಿ ಜಾಹೀರಾತುಗಳು, ಜನಪ್ರತಿನಿಧಿಗಳ ಭಾವಚಿತ್ರವಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ. ಚುನಾವಣಾ ಆಯೋಗ ನೀತಿ ಸಂಹಿತೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಎಲ್ಲ ಮುಖ್ಯ ಎಂಜಿನಿಯರ್‌ಗಳು, ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ಸಹಾಯಕ ಎಂಜಿನಿಯರ್‌ಗಳಿಗೆ ತಕ್ಷಣದಿಂದಲೇ ಜಾಹೀರಾತು ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಆದೇಶಿಸಿದ್ದರು.
ಅದರಂತೆ ರವಿವಾರ ಸಂಜೆ 5.30ರಿಂದ ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಸಾವಿರಾರು ಜಾಹೀರಾತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ. ಮಂಗಳವಾರವೂ ತೆರವು ಕಾರ್ಯಾಚರಣೆ ಮುಂದುವರಿಯಲಿದ್ದು, ತೆರವುಗೊಳಿಸಿದ ನಂತರವೂ ಫ್ಲೆಕ್ಸ್‌ಗಳನ್ನು ಅಳವಡಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.