ನಾಲ್ವರು ಶಾಸಕರ ಅನರ್ಹತೆಗೆ ಶಿಫಾರಸ್ಸು: ವಿಚಾರಣೆ ಮುಂದೂಡಿದ ಸ್ಪೀಕರ್ ರಮೇಶ್ ಕುಮಾರ್

Update: 2019-03-12 14:44 GMT

ಬೆಂಗಳೂರು, ಮಾ.12: ಪಕ್ಷಾಂತರ ನಿಷೇಧ ಕಾಯ್ದೆಯಡಿ ನಾಲ್ವರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ದೂರಿನ ಕುರಿತು ಇಂದು ವಿಚಾರಣೆ ನಡೆಸಬೇಕಿದ್ದ ಸ್ಪೀಕರ್ ರಮೇಶ್ ಕುಮಾರ್, ಚುನಾವಣಾ ನೀತಿ ಸಂಹಿತೆಯಿಂದಾಗಿ ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ.

ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ ಹಾಗೂ ಮಹೇಶ್ ಕುಮಟಳ್ಳಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದು, ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಪೀಕರ್ ರಮೇಶ್ ಕುಮಾರ್‌ಗೆ ದೂರು ಸಲ್ಲಿಸಿದ್ದರು.

ನಾಲ್ವರು ಶಾಸಕರು ಖುದ್ದಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ಕಚೇರಿಯಿಂದ ಸೂಚನೆ ನೀಡಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಚಾರಣೆಯನ್ನು ಮುಂದೂಡಿದ್ದಾರೆ. ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿ ಮಾಡಿಲ್ಲ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

ಸ್ಪೀಕರ್ ವಿಚಾರಣೆಯನ್ನು ಮುಂದೂಡಿರುವುದರಿಂದ ಅತೃಪ್ತ ಶಾಸಕರು ಸದ್ಯಕ್ಕೆ ನಿರಾಳರಾಗಿದ್ದಾರೆ. ನಾಲ್ವರು ಅತೃಪ್ತ ಶಾಸಕರ ಪೈಕಿ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್, ರಮೇಶ್ ಕುಮಾರ್‌ರನ್ನು ಭೇಟಿ ಮಾಡಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರು. ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಸ್ಪೀಕರ್ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಕಾಂಗ್ರೆಸ್ ಪರ ಕೆಲಸ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಪಕ್ಷದ ಆದೇಶದಂತೆ ಕೆಲಸ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News