ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ವಿಚಾರ: ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿರುವ ಸುಮಲತಾ

Update: 2019-03-12 16:15 GMT

ಬೆಂಗಳೂರು, ಮಾ.12: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸೂತ್ರದ ಅನ್ವಯ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದಾಗಿ ಕಾಂಗ್ರೆಸ್ ಮುಖಂಡರು ಈಗಾಗಲೇ ಘೋಷಿಸಿದ್ದಾರೆ. ಆದರೂ, ಹಿರಿಯ ನಟಿ ಸುಮಲತಾ ಅಂಬರೀಶ್ ಮಾತ್ರ ತಮ್ಮ ಪಟ್ಟು ಸಡಿಲಿಸುತ್ತಿಲ್ಲ.

ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಟ ಚಿರಂಜೀವಿ, ಬಹುಭಾಷಾ ನಟ ಕಮಲ್ ಹಾಸನ್ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮೇಲೆ ಸುಮಲತಾ ನಿರಂತರವಾಗಿ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ಹೊಸದಿಲ್ಲಿಯಲ್ಲಿ ನಡೆದಿದ್ದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವೇಣುಗೋಪಾಲ್, ರಾಜ್ಯದ ನಾಯಕರಿಗೆ ಈ ವಿಚಾರವನ್ನು ಗಮನಕ್ಕೆ ತಂದಿದ್ದರು. ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಂಡ್ಯ ಕ್ಷೇತ್ರವನ್ನು ಈಗಾಗಲೇ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ. ಒಂದು ವೇಳೆ ಸುಮಲತಾಗೆ ಟಿಕೆಟ್ ನೀಡಿದರೆ ಮೈತ್ರಿಗೆ ಧಕ್ಕೆಯಾಗಬಹುದು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸಲಹೆಯಂತೆ ಸುಮಲತಾಗೆ ಮಂಡ್ಯದಿಂದ ಕಣಕ್ಕಿಳಿಯಲು ಕಾಂಗ್ರೆಸ್ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ. ಅಲ್ಲದೇ, ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಸುಮಲತಾ ಮನವೊಲಿಸುವಂತೆ ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಡಿಕೆಶಿ ಸಭೆ: ಹೈಕಮಾಂಡ್ ಸೂಚನೆಯಿಂದಾಗಿ ಹೊಸದಿಲ್ಲಿಯಿಂದ ಹಿಂದಿರುಗಿದ ಬಳಿಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸುಮಲತಾರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಲಿದ್ದಾರೆ. ಅಲ್ಲದೇ, ಮಂಡ್ಯ ಹೊರತುಪಡಿಸಿ ಬೇರೆ ಯಾವುದಾದರೂ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಿಂದಲೇ ಸ್ಪರ್ಧಿಸುವಂತೆ ಮನವೊಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News