ಮೈತ್ರಿ ಬಗ್ಗೆ ಅಸಮಾಧಾನ: ಕಾಂಗ್ರೆಸ್-ಜೆಡಿಎಸ್ ಅತೃಪ್ತರನ್ನು ಸೆಳೆಯಲು ಬಿಜೆಪಿ ಸಿದ್ಧತೆ ?
ಬೆಂಗಳೂರು, ಮಾ.12: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿರುವುದರಿಂದ, ಕೆಲವು ಕ್ಷೇತ್ರಗಳಲ್ಲಿ ಎರಡು ಪಕ್ಷಗಳ ಸ್ಥಳೀಯ ಮಟ್ಟದ ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ.
ಬಿಜೆಪಿಯ ಗೆಲುವಿನ ಓಟಕ್ಕೆ ತಡೆ ನೀಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಯೋಚಿಸುತ್ತಿದ್ದರೆ, ಈ ಪಕ್ಷಗಳಲ್ಲಿನ ಅತೃಪ್ತ ನಾಯಕರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ತಿರುಗೇಟು ನೀಡಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ. ಪ್ರಮುಖವಾಗಿ ಹಾಸನ, ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಚಿಂತನೆ ನಡೆಸಲಾಗಿದೆ .
ಹಾಸನ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎ.ಮಂಜು, ಮಾಜಿ ಪ್ರಧಾನಿ ದೇವೇಗೌಡರು ಈ ಕ್ಷೇತ್ರದಿಂದ ಕಣಕ್ಕಿಳಿದರೆ ಮಾತ್ರ ನಾವು ಬೆಂಬಲ ನೀಡುತ್ತೇವೆ. ಒಂದು ವೇಳೆ ಪ್ರಜ್ವಲ್ ರೇವಣ್ಣ ಇಲ್ಲಿ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.
ಆದರೆ, ಮೈತ್ರಿ ಸೂತ್ರದಂತೆ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ. ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದ ಬದಲು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನು ಸಂಪರ್ಕಿಸಿರುವ ಎ.ಮಂಜು, ಬಿಜೆಪಿ ಸೇರ್ಪಡೆಯಾಗಿ ಹಾಸನದಿಂದ ಕಣಕ್ಕಿಳಿಯಲು ಬಯಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಚಿಕ್ಕಬಳ್ಳಾಪುರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಸಂಸದ ವೀರಪ್ಪ ಮೊಯ್ಲಿ ವಿರುದ್ಧ ಅತ್ಯಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ, ಈ ಬಾರಿ ಶತಾಯಗತಾಯ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಬೇಕೆಂದು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ, ಸಮಲತಾ ಅಂಬರೀಶ್‌ರನ್ನು ಪಕ್ಷಕ್ಕೆ ಕರೆತಂದು ಮಂಡ್ಯದಿಂದ ಕಣಕ್ಕಿಳಿಸುವ ಸಂಬಂಧವೂ ಚರ್ಚೆ ನಡೆಯುತ್ತಿದೆ. ಆದರೆ, ಸುಮಲತಾ ಕಾಂಗ್ರೆಸ್ ಹೊರತುಪಡಿಸಿ ಬೇರೆ ಪಕ್ಷಗಳ ಬಗ್ಗೆ ಹೆಚ್ಚಿನ ಒಲವು ಹೊಂದಿರದೆ ಇರುವುದರಿಂದ, ಬಿಜೆಪಿಯ ಆಸೆ ಸ್ವಲ್ಪಮಟ್ಟಿಗೆ ಕಮರಿದೆ.