ಮಂಡ್ಯ ಜನರ ಅಭಿಮಾನ ದುರುಪಯೋಗಪಡಿಸಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-03-12 16:24 GMT

ಬೆಂಗಳೂರು, ಮಾ.12: ಮಂಡ್ಯ ಜಿಲ್ಲೆಗೂ ನಮ್ಮ ಕುಟುಂಬಕ್ಕೂ ಅನೇಕ ವರ್ಷಗಳ ನಂಟಿದ್ದು, ಅವಿನಾಭಾವ ಸಂಬಂಧವಿದೆ. ಈ ಜಿಲ್ಲೆಯ ಜನರ ಪ್ರೀತಿ ಹಾಗೂ ಅಭಿಮಾನವನ್ನು ದುರುಪಯೋಗ ಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕಡೆ ಪರ ವಿರೋಧ ಇದ್ದಂತೆ, ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮೈಸೂರು ಕ್ಷೇತ್ರದಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಉಂಟಾಗಿರುವ ಪೈಪೋಟಿ ಬಗ್ಗೆ ನನಗೆ ಮಾಹಿತಿಯಿಲ್ಲ. ಇನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೊಂದು ವಾರದಲ್ಲಿ ತಿಳಿಯುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಂಗಳೂರಲ್ಲಿ ಹುಟ್ಟಿ, ಬೆಂಗಳೂರಿನಿಂದ ಸಂಸದರಾದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಂಡ್ಯದಲ್ಲಿ ಹುಟ್ಟಿ, ಶಿವಮೊಗ್ಗದಲ್ಲಿ ರಾಜಕೀಯ ಮಾಡುತ್ತಿಲ್ಲವೇ? ನಾನು ಹಾಸನದಲ್ಲಿ ಹುಟ್ಟಿ ರಾಮನಗರದಲ್ಲಿ ರಾಜಕೀಯ ಮಾಡುತ್ತಿಲ್ಲವೇ? ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು ಎಂದು ಕುಮಾರಸ್ವಾಮಿ ಹೇಳಿದರು.

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ, ನಾನು ಆರಾಮಾಗಿದ್ದೇನೆ. ನನಗೆ ಯಾವುದೇ ಆತಂಕವಿಲ್ಲ. ನನ್ನ ಕೆಲಸ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಬಗ್ಗೆ ನಮ್ಮ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News