ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯ ಶ್ಲಾಘನೀಯ: ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್

Update: 2019-03-13 13:16 GMT

ಬೆಂಗಳೂರು, ಮಾ. 13: ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ಬಳಸಿ ಸರಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಪ್ರಾಥಮಿಕ ಶಿಕ್ಷಣ ಬಲಪಡಿಸಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ 16 ಸರಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಂಬೆಸಿ ಸಂಸ್ಥೆಯ ಜತೆ ರಾಜ್ಯ ಸರಕಾರ ಒಪ್ಪಂದ ಮಾಡಿಕೊಂಡ ಬಳಿಕ ಮಾತನಾಡಿದ ಅವರು, ಸರಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಬಡ ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸುತ್ತಿರುವುದು ಇತರೆ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾದರಿ ಎಂದು ಬಣ್ಣಿಸಿದರು.

ಇದೇ ವೇಳೆ ಮಾತನಾಡಿದ ಎಂಬೆಸಿ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಜಿತು ವಿರ್ವಾನಿ, ಸರಕಾರಿ ಶಾಲೆಗಳಿಗೆ ನೆರವು ನೀಡುವ ಮೂಲಕ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಕಾರ್ಯಮಾಡುತ್ತಿದೆ. ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸಿ ಉನ್ನತ ಮಟ್ಟಕ್ಕೇರಲು ಸಹಕಾರಿ ಎಂದರು.

ವಿದ್ಯಾರ್ಥಿಗಳಿಗೆ ಗಣಿತದ ಮೂಲಕ ಕಂಪ್ಯೂಟರ್‌ಗಳು, ಇಂಗ್ಲಿಷ್, ಕ್ರೀಡೆ, ಕಲೆ ಮತ್ತು ಕರಕುಶಲ, ಇ-ತರಗತಿ ಕೊಠಡಿಗಳು, ರಸಪ್ರಶ್ನೆ, ಔಟ್‌ಬೌಂಡ್ ಪ್ರವಾಸ, ವಿದ್ಯಾರ್ಥಿವೇತನ, ಹಳೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮಗಳನ್ನು ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News