ಹಾಲಿ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ: ದಿನೇಶ್ ಗುಂಡೂರಾವ್

Update: 2019-03-13 14:07 GMT

ಬೆಂಗಳೂರು, ಮಾ.13: ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಾಲಿ ಸಂಸದರು ಪ್ರತಿನಿಧಿಸುತ್ತಿರುವ ಯಾವ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡದಿರಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಮೋದಿ ಅಲೆ ಇದ್ದಾಗಲೇ, ಗೆಲುವು ಸಾಧಿಸಿರುವ ನಮ್ಮ ಸಂಸದರಿಗೆ ಗೌರವ ಸಲ್ಲಿಸಬೇಕು ಎಂದರು.

ಸೀಟುಗಳ ಹಂಚಿಕೆ ವಿಚಾರದಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇರುವುದಿಲ್ಲ. ಮಂಡ್ಯದಲ್ಲಿ ಜೆಡಿಎಸ್ ಸಂಸದರು ಇರುವುದರಿಂದ, ಮೈತ್ರಿ ಸೂತ್ರದಂತೆ ಆ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಡಲಾಗಿದೆ. ಸ್ಥಳೀಯವಾಗಿ ಎರಡು ಪಕ್ಷಗಳಲ್ಲಿ ಕೆಲವು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಅವುಗಳನ್ನು ಚರ್ಚಿಸಿ ಬಗೆಹರಿಸುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಅಂಬರೀಶ್ ಬಗ್ಗೆ ನಮಗೆಲ್ಲ ಅಪಾರ ಗೌರವವಿದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ. ಸುಮಲತಾ ಹಾಗೂ ಅಭಿಷೇಕ್‌ಗೆ ರಾಜಕೀಯವಾಗಿ ಬೆಳೆಯಲು ಇಚ್ಛೆ ಇದ್ದರೆ ಖಂಡಿತವಾಗಿಯೂ ಕಾಂಗ್ರೆಸ್ ಅವಕಾಶ ಮಾಡಿಕೊಡುತ್ತದೆ. ಆದರೆ, ಈ ಬಾರಿ ಮಂಡ್ಯದಲ್ಲಿ ಅವಕಾಶ ಸಾಧ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ನಮ್ಮ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಮಾ.16ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಚುನಾವಣಾ ಪರಿಶೀಲನಾ ಸಮಿತಿ ಸಭೆಯಲ್ಲಿ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಜೆಡಿಎಸ್‌ಗೆ ಎಷ್ಟು ಕ್ಷೇತ್ರಗಳನ್ನು ಬಿಟ್ಟು ಕೊಡಲಾಗುತ್ತದೆ ಎಂಬುದನ್ನು ಈಗಾಗಲೇ ಹೇಳಲು ಸಾಧ್ಯವಿಲ್ಲ. ಅಂತಿಮವಾಗಿ ಕೆಲವು ಸಣ್ಣ ಪುಟ್ಟ ಬದಲಾವಣೆಗಳು ಆಗುವ ಸಾಧ್ಯತೆಗಳು ಇವೆ. ಮಾ.18ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಲಬುರಗಿಯಲ್ಲಿ ಆಯೋಜಿಸಿರುವ ಪರಿವರ್ತನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News