ಜೆಡಿಎಸ್ ಗೆ ಸಿಕ್ಕ ಕ್ಷೇತ್ರಗಳು ಯಾವುವು? ಇಲ್ಲಿದೆ ಸಂಪೂರ್ಣ ವಿವರ

Update: 2019-03-13 15:24 GMT

ಬೆಂಗಳೂರು, ಮಾ.13: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಮೈತ್ರಿ ಸರಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ.

ಬುಧವಾರ ಕೇರಳದ ಕೊಚ್ಚಿನ್‌ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಾನೀಶ್ ಅಲಿ, ರಾಜ್ಯದಲ್ಲಿ ಕ್ಷೇತ್ರಗಳ ಹಂಚಿಕೆ ಕುರಿತು ಚರ್ಚಿಸಿ, ಪಟ್ಟಿಯನ್ನು ಬಿಡುಗಡೆ ಮಾಡಿದರು.

ಜೆಡಿಎಸ್ ಪಕ್ಷಕ್ಕೆ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ ಹಾಗೂ ವಿಜಯಪುರ(ಎಸ್ಸಿ) ಕ್ಷೇತ್ರಗಳನ್ನು ಕಾಂಗ್ರೆಸ್ ಬಿಟ್ಟು ಕೊಟ್ಟಿದೆ. ರಾಜ್ಯದಲ್ಲಿ ಹಾಲಿ ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಬಿಟ್ಟುಕೊಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ, ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಪ್ರತಿನಿಧಿಸುತ್ತಿರುವ ತುಮಕೂರು ಕ್ಷೇತ್ರ ಕೈ ತಪ್ಪಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು-ಕೊಡುಗು ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಬಳಿ ಉಳಿಸಿಕೊಳ್ಳಲು, ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಕೇಂದ್ರ ಸಚಿವರಾದ ಡಾ.ಎಂ.ವೀರಪ್ಪ ಮೊಯ್ಲಿ ಪ್ರತಿನಿಧಿಸುತ್ತಿರುವ ಚಿಕ್ಕಬಳ್ಳಾಪುರ ಹಾಗೂ ಕೆ.ಎಚ್.ಮುನಿಯಪ್ಪ ಪ್ರತಿನಿಧಿಸುತ್ತಿರುವ ಕೋಲಾರ ಲೋಕಸಭಾ ಕ್ಷೇತ್ರಗಳಿಗೂ ಜೆಡಿಎಸ್ ಬೇಡಿಕೆ ಇಟ್ಟಿತ್ತು. ಆದರೆ, ಕಾಂಗ್ರೆಸ್ ಈ ಕ್ಷೇತ್ರಗಳನ್ನು ಬಿಟ್ಟುಕೊಡಲು ಸಿದ್ಧವಾಗಿಲ್ಲ.

ಇನ್ನುಳಿದಂತೆ, ಅಲ್ಪಸಂಖ್ಯಾತ ಸಮುದಾಯದ ಮತದಾರರು ನಿರ್ಣಾಯಕವಾಗಿರುವ ವಿಜಯಪುರ ಮೀಸಲು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಸ್ಥಳೀಯ ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಉತ್ತರ ಕನ್ನಡ ಕ್ಷೇತ್ರ ಜೆಡಿಎಸ್ ಪಾಲಾಗಿದೆ.

ಕಾಂಗ್ರೆಸ್ ಸ್ಪರ್ಧೆ: ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ದಕ್ಷಿಣ ಕನ್ನಡ(ಮಂಗಳೂರು), ಬೀದರ್, ಬೆಳಗಾವಿ, ರಾಯಚೂರು(ಎಸ್ಟಿ), ಕೊಪ್ಪಳ, ಬಳ್ಳಾರಿ(ಎಸ್ಟಿ), ಚಿತ್ರದುರ್ಗ(ಎಸ್ಸಿ), ದಾವಣಗೆರೆ, ಹಾವೇರಿ, ಕಲಬುರ್ಗಿ(ಎಸ್ಸಿ), ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೋಲಾರ(ಎಸ್ಸಿ), ಚಿಕ್ಕೋಡಿ-ಸದಲಗಾ, ಧಾರವಾಡ, ಚಾಮರಾಜನಗರ (ಎಸ್ಸಿ) ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ.

ಸುಮಲತಾಗೆ ನಿರಾಶೆ: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದರಿಂದ, ಕಾಂಗ್ರೆಸ್ ಟಿಕೆಟ್ ಸಿಗಬಹುದು ಎಂಬ ಆಕಾಂಕ್ಷೆ ಹೊಂದಿದ್ದ ಹಿರಿಯ ನಟಿ ಸುಮಲತಾ ಅಂಬರೀಶ್‌ಗೆ ನಿರಾಸೆಯಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವುದು ಅಂತಿಮವಾಗಿದೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿರುವುದಾಗಿ ಇಂದು ಘೋಷಿಸಿರುವ ದೇವೇಗೌಡ, ನಾಳೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಗೋ ಬ್ಯಾಕ್ ದೇವೇಗೌಡ: ನಮ್ಮ ಸಂಸದ ನಮ್ಮ ಹೆಮ್ಮೆ, ಮುದ್ದಹನುಮೇಗೌಡ ನಮ್ಮ ನಾಯಕ. ದೇವೇಗೌಡರೇ ತುಮಕೂರಿಗೆ ವಲಸೆ ಬರಬೇಡಿ ಎಂದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ. ಇದೀಗ, ತುಮಕೂರು ಕ್ಷೇತ್ರವನ್ನು ಜೆಡಿಎಸ್ ಬಿಟ್ಟು ಕೊಟ್ಟಿರುವುದರಿಂದ, ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಹಾಗೂ ತುಮಕೂರು ಎರಡು ಕ್ಷೇತ್ರಗಳಿಂದ ಎಲ್ಲಿ ಸ್ಪರ್ಧಿಸಬೇಕೆಂದು ಗೊಂದಲದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬಹುತೇಕ ಬೆಂಗಳೂರು ಉತ್ತರದಿಂದಲೇ ಕಣಕ್ಕಿಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News