ಬಿಎಸ್‌ವೈ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

Update: 2019-03-13 15:44 GMT

ಬೆಂಗಳೂರು, ಮಾ.13: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಪ್ರತಿವಾದಿಯೂ ಆದ ದೂರದಾರ ವಾಸುದೇವರೆಡ್ಡಿ ಅವರಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ವಿಚಾರಣೆಯನ್ನು ಮಾ.20ಕ್ಕೆ ಮುಂದೂಡಲಾಗಿದೆ. 

ಪ್ರಕಣವೇನು: ನಗರದ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯ ಜಾಗವನ್ನು ರಾಜ್ಯ ಸರಕಾರ 2000-2001ರಲ್ಲಿ ಐಟಿ ಕಾರಿಡಾರ್ ಎಂದು ಘೋಷಿಸಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆ ಐಎಡಿಬಿ) ಮಾರತ್‌ಹಳ್ಳಿ, ಬೆಳ್ಳಂದೂರು, ಸರ್ಜಾಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶದ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತು.  

ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10ಎಕರೆ, ಸರ್ವೇ ನಂ 10ರ 33 ಗುಂಟೆಯನ್ನು ಡಿನೋಟಿಫೈ ಮಾಡಲು ಉಪ ಮುಖ್ಯಮಂತ್ರಿಯಾಗಿದ್ದ ಬಿಎಸ್‌ವೈ ಅದೇಶಿಸಿರುವುದು ಅಕ್ರಮವಾಗಿದೆ ಎಂದು ಆರೋಪಿಸಿ ವಾಸುದೇವರೆಡ್ಡಿ ಎಂಬುವರು 2013ರ ಜುಲೈ 10ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ದೂರಿನ ಕುರಿತಂತೆ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು 2015ರ ಫೆ.18ರಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಇದರನ್ವಯ ಪೊಲೀಸರು 2015ರ ಫೆ.21ರಂದು ಎಫ್‌ಐಆರ್ ದಾಖಲಿಸಿ, ಯಡಿಯೂರಪ್ಪ ಅವರನ್ನು ಎರಡನೆ ಆರೋಪಿಯನ್ನಾಗಿ ಮಾಡಿದ್ದಾರೆ. ವಿಚಾರಣೆಗೆ ತಡೆ ನೀಡಬೇಕು ಮತ್ತು ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News