ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರ: ಬೆಳಗಾವಿ ಕಾಂಗ್ರೆಸ್ ನಾಯಕರೊಂದಿಗೆ ಸಿದ್ದರಾಮಯ್ಯ ಸಭೆ

Update: 2019-03-14 14:22 GMT

ಬೆಂಗಳೂರು, ಮಾ.14: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಮುಖಂಡರ ಸಭೆಯಲ್ಲಿ ಎರಡು ಕ್ಷೇತ್ರಗಳಿಂದ ಯಾವ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು.

ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿದ್ದೇವೆ. ಮಾ.16ರಂದು ಹೊಸದಿಲ್ಲಿಯಲ್ಲಿ ಎಐಸಿಸಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಜಿಲ್ಲಾ ಮುಖಂಡರ ಸಭೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂದಿರಲಿಲ್ಲ. ಅವರ ಜೊತೆ ಇದ್ದ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಬಂದಿದ್ದರು. ರಮೇಶ್ ಜಾರಕಿಹೊಳಿ ಗೈರು ಹಾಜರಿ ಬಗ್ಗೆ ನೀವು ಏನು ಬೇಕಾದರೂ ಕಲ್ಪಿಸಿಕೊಳ್ಳಬಹುದು ಎಂದು ಅವರು ಹೇಳಿದರು. ಶಾಸಕರ ಅನರ್ಹತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಾ.ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ಮಾಡಬೇಕೋ ಬೇಡವೋ ಅದನ್ನು ಸ್ಪೀಕರ್ ನಿರ್ಧರಿಸುತ್ತಾರೆ. ಅವರನ್ನು ಅನರ್ಹಗೊಳಿಸುವಂತೆ ನಾವು ಸ್ಪೀಕರ್‌ಗೆ ದೂರು ನೀಡಿ, ಸಂಬಂಧಪಟ್ಟ ದಾಖಲಾತಿಗಳನ್ನು ನೀಡಿದ್ದೇವೆ ಎಂದರು.

ನಾನು ಟಿಕೆಟ್ ಆಕಾಂಕ್ಷಿಯಲ್ಲ: ನಾನು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ. ಕಳೆದ ಬಾರಿ ನಾನು ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು, ನರೇಂದ್ರಮೋದಿಯ ಅಲೆ ನಡುವೆಯೂ ನಾಲ್ಕು ಲಕ್ಷಕ್ಕಿಂತ ಅಧಿಕ ಮತಗಳನ್ನು ಪಡೆದಿದ್ದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಈಗ ನಾನು ಶಾಸಕಿಯಾಗಿ ಚುನಾಯಿತಳಾಗಿದ್ದು, ನನ್ನ ಮತ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಬೇಕಿದೆ. ಹೈಕಮಾಂಡ್ ಬೆಳಗಾವಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದರೆ ಕಣಕ್ಕಿಳಿಯುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನಾಗಲಿ ನನ್ನ ಸಹೋದರನಾಗಲಿ ಹೈಕಮಾಂಡ್‌ಗೆ ವಿರುದ್ಧವಾಗಿ ಕೆಲಸ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬೆಳಗಾವಿಯಿಂದ ಹೆಬ್ಬಾಳ್ಕರ್-ನಿಂಬಾಳ್ಕರ್?: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ಕಣಕ್ಕಿಳಿಸುವ ಸಂಬಂಧ ಪಕ್ಷದ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದರೆ, ಇವರಿಬ್ಬರೂ ಇದೇ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ಬದಲು ತನ್ನ ಸಹೋದರ ಚನ್ನರಾಜ ಹಟ್ಟಿಹೋಳಿಯನ್ನು ಕಣಕ್ಕಿಳಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಚನ್ನರಾಜ ಹಟ್ಟಿಹೋಳಿ, ಕ್ಷೇತ್ರದೆಲ್ಲೆಡೆ ಸಂಚರಿಸಿ, ಜನ ಬೆಂಬಲ ಯಾಚಿಸುತ್ತಿದ್ದಾರೆ. ಅಲ್ಲದೆ, ಯುವಕರ ಪಡೆಯನ್ನು ಕಟ್ಟಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ.

ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ವಿರುದ್ಧ ಕಣಕ್ಕಿಳಿದಿದ್ದ ಲಕ್ಷ್ಮಿ ಹೆಬ್ಬಾಳ್ಕರ್ 4.78 ಲಕ್ಷ ಮತಗಳನ್ನು ಪಡೆದಿದ್ದು, 60 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News