ಮಾಜಿ ಸಚಿವ ಎ.ಮಂಜು ಬಿಜೆಪಿ ಸೇರಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

Update: 2019-03-14 15:28 GMT

ಬೆಂಗಳೂರು, ಮಾ.14: ಹಾಸನ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎ.ಮಂಜು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಈ ಸಂಬಂಧ ಆತ ನನ್ನ ಜೊತೆ ಮಾತನಾಡಿದ್ದಾನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯಗಳಿವೆ. ಆದರೆ, ಎ.ಮಂಜು ಬಿಜೆಪಿಗೆ ಸೇರುತ್ತಾರೆ ಎಂಬುದು ಸತ್ಯಕ್ಕೆ ದೂರವಾದದ್ದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನು ಎ.ಮಂಜು ಭೇಟಿಯಾಗಿದ್ದರಿಂದ ಇಂತಹ ಸುದ್ದಿಗಳು ಹರಿದಾಡುತ್ತಿವೆ. ಯಡಿಯೂರಪ್ಪರನ್ನು ನಾನು ಭೇಟಿಯಾಗಿದ್ದೆ. ಅದಕ್ಕೆಲ್ಲ ಏನೇನೋ ಕಲ್ಪಿಸಿಕೊಂಡರೆ ಹೇಗೇ? ಎ.ಮಂಜು ಬಿಜೆಪಿ ಸೇರ್ಪಡೆಯಾಗುವುದಿಲ್ಲವೆಂದು ನನಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಬಾರದು ಎಂದು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದೆ. ಆದರೆ, ಹೈಕಮಾಂಡ್ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಇವತ್ತು ಮೈಸೂರಿಗೆ ಹೋಗುತ್ತಿದ್ದೇನೆ. ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಯಾರನ್ನು ಕಣಕ್ಕಿಳಿಸಬೇಕು ಎಂಬ ತೀರ್ಮಾನ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಸೀಟುಗಳ ಹಂಚಿಕೆ ವಿಚಾರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಅಸಮಾಧಾನ ಹೊಂದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ನಾವು ಮೈತ್ರಿ ಸರಕಾರವನ್ನು ನಡೆಸುತ್ತಿದ್ದೇವೆ. ಮೈತ್ರಿ ವಿಚಾರ ಬಂದಾಗ ಎರಡು ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗುತ್ತದೆ ಎಂದರು.

ಮಂಡ್ಯದಲ್ಲಿ ಇವತ್ತು ನಡೆದ ಜೆಡಿಎಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಮ್ಮಿಶ್ರ ಸರಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಒಪ್ಪಲಿಲ್ಲ ಎಂದು ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ, ನನಗೆ ಗೊತ್ತಿರದ ವಿಷಯದ ಬಗ್ಗೆ ಮಾತನಾಡುವುದಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News