ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಎರಡು ದಿನ ಅವಕಾಶ

Update: 2019-03-14 17:09 GMT

ಬೆಂಗಳೂರು, ಮಾ.14: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕ್ಷೇತ್ರಗಳಾದ್ಯಂತ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಮಾ.16ರವರೆಗೂ ಅವಕಾಶವಿದ್ದು, ಕೂಡಲೇ ನೋಂದಣಿ ಮಾಡಿಕೊಳ್ಳುವಂತೆ ಆಯೋಗ ಸೂಚಿಸಿದೆ.

ಎ.18ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿನ ಅರ್ಹ ಮತದಾರರು ನೋಂದಣಿಗೆ ಅವಕಾಶವಿದೆ.

ಎರಡನೆ ಹಂತದಲ್ಲಿ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾ.25ರ ವರೆಗೂ ಅವಕಾಶವಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿನ ಅರ್ಹ ಮತದಾರರು ನೋಂದಣಿಗೆ ಭಾರತೀಯ ಚುನಾವಣಾ ಆಯೋಗ ಕಾಲಾವಕಾಶ ನೀಡಿದೆ.

ಸೂಕ್ಷ್ಮ-ಅತಿಸೂಕ್ಷ್ಮ ಮತಗಟ್ಟೆಗಳ ಪರಿಷ್ಕರಣೆ: ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯಶಂಕರ್ ಬೆಂಗಳೂರಿನ ಕೆ.ಆರ್.ಪುರ, ಪುಲಿಕೇಶಿನಗರ, ಬ್ಯಾಟರಾಯನಪುರ, ಹೆಬ್ಬಾಳ ಮತ್ತಿತರ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸೂಕ್ಷ್ಮ-ಅತಿಸೂಕ್ಷ್ಮ ಮತಗಟ್ಟೆಗ ಪರಿಶೀಲನೆ ನಡೆಸಿದರು.

ಅಲ್ಲದೆ, ಚುನಾವಣಾ ಚೆಕ್‌ಪೋಸ್ಟ್ ಸ್ಥಾಪನೆ ಕುರಿತಂತೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಗುಲಾಬಿ ಬಣ್ಣದ ಮತಗಟ್ಟೆಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕೆಂಬ ಬಗ್ಗೆ ಸ್ಥಳೀಯ ಚುನಾವಣಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವ ಜಿಲ್ಲಾಧಿಕಾರಿಗಳು ಮತಗಟ್ಟೆ ಬಳಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಲ್ಲದೆ, ವಿಕಲಚೇತನ ಮತದಾರರಿಗೆ ಒದಗಿಸಬೇಕಾಗಿರುವ ಸೌಲಭ್ಯಗಳ ಬಗ್ಗೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News