ಬಜೆಟ್ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣ: ವಿ.ಶಶಿಧರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Update: 2019-03-14 17:17 GMT

ಬೆಂಗಳೂರು, ಮಾ.14: ಸಿಎಂ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಪೊಲೀಸರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಪೊಲೀಸ್ ಮಹಾಸಭಾ ಅಧ್ಯಕ್ಷ ವಿ.ಶಶಿಧರ್ ಫೇಸ್‌ಬುಕ್‌ನಲ್ಲಿ ಹಲವು ಅಂಶಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶಶಿಧರ್ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿದೆ.

ಈ ಸಂಬಂಧ ವಿ.ಶಶಿಧರ್ 1ನೆ ಎಸಿಎಂಎಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ಹಾಗೂ ತನಿಖೆಗೆ ತಡೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿತು.

ಅರ್ಜಿದಾರ ವಿ.ಶಶಿಧರ್ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ಅರ್ಜಿದಾರ ವಿ.ಶಶಿಧರ್ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ಕುರಿತು ಹೇಳಿಕೆ ನೀಡಿದ್ದನ್ನೆ ನೆಪವಾಗಿಟ್ಟುಕೊಂಡು ಯಲಹಂಕ ನ್ಯೂ ಪೊಲೀಸ್ ಠಾಣಾ ಪೊಲೀಸರು 124(ಎ), 109, 120(ಬಿ) ಸೇರಿ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಈ ವಾದವನ್ನು ಆಲಿಸಿದ ನ್ಯಾಯಪೀಠವು ದೇಶದ ಪ್ರತಿಯೊಬ್ಬ ಪ್ರಜೆಗೂ ತನ್ನದೆ ಆದ ಭಾವನೆಗಳನ್ನು ಹಂಚಿಕೊಳ್ಳುವ ಅವಕಾಶವಿದೆ. ಆದರೆ, ಪೊಲೀಸರು ಶಶಿಧರ್ ಅವರ ಹೇಳಿಕೆಯನ್ನೇ ವಿರೋಧ ಮಾಡಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿತು. ಅಲ್ಲದೆ, ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News