ದೇವೇಗೌಡ ಗೆಲುವಿಗೆ ಒಮ್ಮತದ ನಿರ್ಧಾರ: ಸಚಿವ ಕೃಷ್ಣಭೈರೇಗೌಡ

Update: 2019-03-15 14:50 GMT

ಬೆಂಗಳೂರು, ಮಾ.15: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಣಕ್ಕಿಳಿದರೆ ಅವರ ಗೆಲುವಿಗೆ ಶ್ರಮಿಸಲು ಎಲ್ಲ ಶಾಸಕರು ಒಮ್ಮತದ ನಿರ್ಧಾರ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಶುಕ್ರವಾರ ನಗರದಲ್ಲಿರುವ ತಮ್ಮ ಸರಕಾರಿ ನಿವಾಸದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಪಟ್ಟ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ. ದೇವೇಗೌಡರು ಅಭ್ಯರ್ಥಿಯಾಗಿ ಬಂದರೆ, ಅವರ ಗೆಲುವಿಗೆ ಎಲ್ಲ ಶಾಸಕರು ಕೈ ಜೋಡಿಸಿ ಶ್ರಮಿಸಲಿದ್ದಾರೆ ಎಂದು ಅವರು ಹೇಳಿದರು.

ದೇವೇಗೌಡರು ಈವರೆಗೆ ಅಧಿಕೃತವಾಗಿ ಇಂತಹದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಪ್ರಕಟಿಸಲಿಲ್ಲ. ಆದುದರಿಂದ, ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಏನು ಮಾಡಬೇಕು? ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಏನು ಮಾಡಬೇಕು? ಎಂಬುದರ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ. ಅಭ್ಯರ್ಥಿ ಪರ ಯಾವ ರೀತಿ ಪ್ರಚಾರ ಕೈಗೊಳ್ಳಬೇಕು ಎಂಬುದರ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಚರ್ಚೆ ನಡೆಸಿದ್ದೇವೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನು ಚರ್ಚೆ ಮಾಡಿದ್ದೇವೆ ಎಂದು ಅವರು ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಿಂದ ಸ್ಪರ್ಧೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ನಮ್ಮ ರಾಜ್ಯದಿಂದ ಸ್ಪರ್ಧೆ ಮಾಡಲಿ ಎಂಬ ಮಾತು ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ಈ ಹಿಂದೆ ಚಿಕ್ಕಮಗಳೂರಿನಿಂದ ಇಂದಿರಾಗಾಂಧಿ, ಬಳ್ಳಾರಿಯಿಂದ ಸೋನಿಯಾಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದೇ ರೀತಿ ರಾಹುಲ್ ಗಾಂಧಿ ಸ್ಪರ್ಧಿಸಿದರೆ ಸ್ವಾಗತಿಸುತ್ತೇವೆ ಎಂದರು.

ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಕಾಂಗ್ರೆಸ್ ಶಾಸಕರಾದ ಭೈರತಿ ಬಸವರಾಜ, ಭೈರತಿ ಸುರೇಶ್, ಎಸ್.ಟಿ.ಸೋಮಶೇಖರ್, ಮುನಿರತ್ನ, ಅಖಂಡ ಶ್ರೀನಿವಾಸಮೂರ್ತಿ, ಜೆಡಿಎಸ್ ಶಾಸಕರಾದ ಕೆ.ಗೋಪಾಲಯ್ಯ, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News