ಉಡುಪಿಯಲ್ಲಿ ಅನುಮತಿ ಪಡೆಯದೆ ಪ್ರತಿಭಟನೆ: ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ

Update: 2019-03-15 17:56 GMT

ಉಡುಪಿ, ಮಾ.15: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದ ಎದುರು ಮಾ.14ರಂದು ರಾತ್ರಿ 9 ಗಂಟೆಯ ಸುಮಾರಿಗೆ ಯಾವುದೇ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ನೇತೃತ್ವದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರಾ, ಯುವ ಕಾಂಗ್ರೆಸ್ ಮುಖಂಡ ಇಮ್ರಾನ್ ಹಾಗೂ ಇತರರು ಉಡುಪಿ-ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿರುವ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಖಂಡಿಸಿ, ಅನುಮತಿ ಪಡೆಯದೆ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.

ಈ ಮೂಲಕ ಆರೋಪಿಗಳು ಸ್ಥಳದಲ್ಲಿ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಯಾವುದೇ ಅನುಮತಿ ಇಲ್ಲದೆ ದಿಡೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವುದಾಗಿ ಉಡುಪಿ ಠಾಣಾಧಿಕಾರಿ ರವಿ ಎನ್. ಎನ್. ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News