ವಿವಿ ಪ್ಯಾಟ್ ಪರಿಶೀಲನೆಗೆ 21 ಪ್ರತಿಪಕ್ಷಗಳು ಮನವಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

Update: 2019-03-15 17:14 GMT

ಹೊಸದಿಲ್ಲಿ, ಮಾ. 15: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ಘೋಷಿಸುವ ಮೊದಲು ಶೇ. 50ರಷ್ಟು ಮತಗಳನ್ನು ವಿವಿಪ್ಯಾಟ್ ಜೊತೆ ಹೋಲಿಸಿ ನೋಡಬೇಕು ಎಂದು 21 ಪ್ರತಿಪಕ್ಷಗಳು ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಚುನಾವಣಾ ಆಯೋಗಕ್ಕೆ ನೋಟಿಸು ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿ ಗಳಾದ ದೀಪಕ್ ಗುಪ್ತಾ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪೀಠ ಪ್ರಕರಣದ ವಿಚಾರಣೆಯನ್ನು ಮಾರ್ಚ್ 25ಕ್ಕೆ ನಿಗದಿಪಡಿಸಿದೆ ಹಾಗೂ ನ್ಯಾಯಾಲಯಕ್ಕೆ ನೆರವು ನೀಡಲು ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

 ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಿತ ಪ್ರತಿಪಕ್ಷದ ಹಲವು ನಾಯಕರು ಸುಪ್ರೀಂ ಕೋರ್ಟ್‌ನಲ್ಲಿ ಈ ಮನವಿ ಸಲ್ಲಿಸಿದ್ದರು. ಇದಕ್ಕಾಗಿ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ ಪಕ್ಷಗಳೆಂದರೆ ಕಾಂಗ್ರೆಸ್, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ, ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಆಪ್), ಎಡ ಪಕ್ಷಗಳು, ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಮಾಯಾವತಿ ಅವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)

ಇಲೆಕ್ಟ್ರಾನಿಕ್ಸ್ ಮತದಾನ ಯಂತ್ರ (ಇವಿಎಂ) ತಿರುಚುತ್ತಿರುವ ಕುರಿತಂತೆ 21 ಪ್ರತಿಪಕ್ಷಗಳ ನಾಯಕರು ಕಳೆದ ತಿಂಗಳು ಚುನಾವಣಾ ಆಯೋಗವನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News