ರಾಜ್ಯದಿಂದ ಸ್ಪರ್ಧಿಸಿದರೆ ರಾಹುಲ್ ಗಾಂಧಿಯನ್ನು ಸೋಲಿಸುತ್ತೇವೆ: ಎನ್.ರವಿಕುಮಾರ್

Update: 2019-03-16 16:37 GMT

ಬೆಂಗಳೂರು, ಮಾ.16: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಿದರೆ ಅವರಿಗೆ ನಾವು ಖಂಡಿವಾಗಿಯೂ ಸೋಲಿನ ರುಚಿ ತೋರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರ ವಿರುದ್ಧ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಅವರು ಗೆಲುವು ಕಾಂಗ್ರೆಸ್ ನಾಯಕರು ಅಂದುಕೊಂಡಷ್ಟು ಸುಲಭವಲ್ಲ ಎಂದರು.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮೈತ್ರಿ ಮಾಡಿಕೊಂಡು, ಕಾಂಗ್ರೆಸ್ ಪಕ್ಷಕ್ಕೆ ಕೇವಲ ಎರಡು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದರಿಂದಾಗಿ, ಉತ್ತರಪ್ರದೇಶದ ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್‌ಗಾಂಧಿ, ಕ್ಷೇತ್ರವನ್ನು ಬದಲಾಯಿಸಲು ಮುಂದಾಗಿದ್ದಾರೆ ಎಂದು ಅವರು ಟೀಕಿಸಿದರು.

ಉತ್ತರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದೆ ಎಂಬ ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ದಕ್ಷಿಣ ಭಾರತದತ್ತ ಮುಖ ಮಾಡಿದ್ದಾರೆ ಎಂದು ರವಿಕುಮಾರ್ ದೂರಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಹಿರಿಯ ನಟಿ ಸುಮಲತಾ ಅಂಬರೀಶ್‌ರನ್ನು ಬೆಂಬಲಿಸುವ ವಿಚಾರದ ಬಗ್ಗೆ ನಾಳೆ ನಡೆಯಲಿರುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು. ಮಂಡ್ಯದಲ್ಲಿನ ವಂಶಪಾರಂಪರ್ಯ ಹಾಗೂ ಹಾಸನ ಜಿಲ್ಲೆಯ ಕಣ್ಣೀರ ಕೋಡಿಗೆ ರಾಜ್ಯದ ಜನ ಈ ಬಾರಿ ಚುನಾವಣೆಯಲ್ಲಿ ಸರಿಯಾದ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News