ತುಮಕೂರಿನಲ್ಲಿ ದೇವೇಗೌಡರು ಸ್ಪರ್ಧಿಸಿದರೂ ಬೆಂಬಲ ನೀಡಲ್ಲ: ಯುವ ಕಾಂಗ್ರೆಸ್ ಮುಖಂಡ ರಾಜೇಂದ್ರ

Update: 2019-03-16 18:51 GMT

ತುಮಕೂರು,ಮಾ.16: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೂ ಯಾವುದೇ ಕಾರಣಕ್ಕೂ ಬೆಂಬಲ ನೀಡಲ್ಲ ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಾಲಿ ಸಂಸದರಿರುವ ಲೋಕಸಭಾ ಕ್ಷೇತ್ರಗಳ ಪೈಕಿ ತುಮಕೂರು ಕ್ಷೇತ್ರವನ್ನು ಮಾತ್ರ ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ನಗರದ ಟೌನ್ ಹಾಲ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

'ಹಾಲಿ ಸಂಸದರಿರುವ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಬಿಟ್ಟುಕೊಡಬಾರದು. ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕಾಂಗ್ರೆಸ್, ಜೆಡಿಎಸ್ ವಿರುದ್ಧವೇ ಸೆಣೆಸುತ್ತಾ ಬಂದಿದೆ. ಇದುವರೆಗೆ ಜೆಡಿಎಸ್‍ಗೆ ಓಟ್ ಹಾಕಬೇಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಳಲು ಸೈದ್ಧಾಂತಿಕವಾಗಿ ಹಾಗೂ ಮಾನಸಿಕವಾಗಿ ಸಿದ್ಧರಾಗಲು ಸಾಧ್ಯವೇ ಇಲ್ಲ. ಎಂದಿಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪರವಾಗಿ ಮತ ಯಾಚಿಸುವ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷ ಜಿಲ್ಲೆಯಲ್ಲಿ ಸದೃಢವಾಗಿದ್ದು, ನಮ್ಮ ಪಕ್ಷದ ಹಾಲಿ ಸಂಸದರಿಗೆ ಟಿಕೆಟ್ ನೀಡಲೇಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ 44 ಜನ ಕಾಂಗ್ರೆಸ್ ಸಂಸದರು ಗೆದ್ದಿದ್ದಾರೆ. ಇವರ ಪೈಕಿ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸಲಾಗಿದೆ. ಇದರ ಅರ್ಥವೇನು. ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಡಬಾರದು. ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲೇಬೇಕು ಎಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.

ಶತಾಯಗತಾಯ ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಉಳಿಸಿಕೊಳ್ಳಲೇಬೇಕು ಎಂದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದ್ದು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ತನ್ನದೇ ಆದ ಶಕ್ತಿ ಹೊಂದಿದೆ. ಹಾಲಿ ಸಂಸದರ ಅಭಿವೃದ್ಧಿ ಕಾರ್ಯಗಳು, ಜನಪರ ಕಾಳಜಿ ಪಕ್ಷಕ್ಕೆ ಬಲ ತಂದು ಕೊಟ್ಟಿದೆ. ಪಕ್ಷದತ್ತ ಜನರ ಒಲವು ಇರುವ ಸಂದರ್ಭದಲ್ಲೇ ಕ್ಷೇತ್ರವನ್ನು ಬಿಟ್ಟು ಕೊಡುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಅವರ ಮೂಲಕ ಹೈಕಮಾಂಡ್ ಗಮನ ಸೆಳೆಯಲಾಗುವುದು ಎಂದರು.  

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಮಾ.19ಕ್ಕೆ ಮುಂದೂಡಲಾಗಿದೆ. ಅಂದಿನ ಸಭೆಯಲ್ಲಿ ಪಕ್ಷದ ಹೈಕಮಾಂಡ್ ಈ ಕುರಿತು ಗಮನ ಹರಿಸಬೇಕು. ತುಮಕೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡರನ್ನೇ ಘೋಷಣೆ ಮಾಡಬೇಕು ಎಂದು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.  

ಮಾಜಿ ಶಾಸಕ ಎಸ್.ಶಫಿ ಅಹಮದ್ ಮಾತನಾಡಿ, ಸಂಸದ ಮುದ್ದಹನುಮೇಗೌಡರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತರು ಹೊತ್ತಿದ್ದಾರೆ. ಈಗಾಗಲೇ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕಾಂಗ್ರೆಸ್‍ನ ಎಲ್ಲ ನಾಯಕರನ್ನು ಭೇಟಿ ಮಾಡಿ ಕ್ಷೇತ್ರ ಉಳಿಸುವಂತೆ ಮನವಿ ಮಾಡಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೊಡದೆ ಕಾಂಗ್ರೆಸ್‍ಗೆ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.  

ಟೌನ್‍ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‍ಗೆ ತುಮಕೂರು ಕ್ಷೇತ್ರ ಬಿಟ್ಟು ಕೊಟ್ಟಿರುವ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರ ಪರ ಜೈಕಾರ, ಜಯಘೋಷಗಳು ಮೊಳಗಿದವು.
ಪ್ರತಿಭಟನೆಯಲ್ಲಿ ಮುಖಂಡರಾದ ಜಿಲ್ಲಾ ಯುವ ಘಟಕದ ಶರತ್, ಚೌದ್ರಿರಂಗಪ್ಪ, ಗೀತಾರುದ್ರೇಶ್, ಆಟೋರಾಜು, ತರುಣೇಶ್, ತು.ಬಿ.ಮಲ್ಲೇಶ್, ಪಾಲಿಕೆ ಸದಸ್ಯ ನಯಾಜ್ ಅಹಮದ್, ವೇಣುಗೋಪಾಲ್ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News