139 ಟ್ಯಾಂಕರ್ ಗಳ ಮೂಲಕ ನೀರು ಪೂರೈಕಗೆ ಕ್ರಮ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಗೌತಮ್

Update: 2019-03-16 19:04 GMT

ಚಿಕ್ಕಮಗಳೂರು, ಮಾ.16: ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ 4 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಬರ ಪೀಡಿತ ತಾಲೂಕುಗಳ ಪೈಕಿ ಈ ಬಾರಿ 39 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಕಂಡು ಬಂದಿದೆ. ಈ ಗ್ರಾಮಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಬರಪೀಡಿತ ಪ್ರದೇಶ ವ್ಯಾಪ್ತಿಯಲ್ಲಿ 39 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಗ್ರಾಮಗಳಿಗೆ 139 ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಕ್ರಮಕೈಗೊಳ್ಳಲಾಗಿದೆ. ಕಡೂರು ತಾಲೂಕಿನಲ್ಲಿ 24 ಗ್ರಾಮಗಳು ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ 15 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ ಎಂದರು.

ತರೀಕೆರೆ ತಾಲೂಕು ವ್ಯಾಪ್ತಿಯಲ್ಲೂ ಕೆಲ ಗ್ರಾಮಗಳಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲು ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ತರೀಕೆರೆ ತಾಲೂಕು ಸೇರಿದಂತೆ ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆಗೆ ಕ್ರಮವಹಿಸಲಾಗುತ್ತದೆ ಎಂದ ಅವರು, ಇದಕ್ಕಾಗಿಯೇ 4 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದ ಅವರು, ಕುಡಿಯುವ ನೀರಿನ ಸಮರ್ಪಕ ವಿತರಣೆ ದೃಷ್ಟಿಯಿಂದ ಸಮಸ್ಯೆ ಇರುವ ಗ್ರಾಮಗಳಿಗೆ ಪ್ರತೀವಾರ ಭೇಟಿ ನೀಡುವಂತೆ ಸಂಬಂಧಿಸಿದ ಎಇಇಗಳಿಗೆ ಸೂಚಿಸಲಾಗಿದೆ ಎಂದರು.

ಕುಡಿಯುವ ನೀರು ಪೂರೈಕೆ ಸಂಬಂಧ ಜಿಲ್ಲಾಧಿಕಾರಿ ಪಿಡಿ ಖಾತೆಗೆ ಇನ್ನೂ 7 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕುಡಿಯುವ ನೀರಿನ ಪೈಪ್‍ಲೈನ್, ಕೊಳವೆ ಬಾವಿಗಳ ದುರಸ್ತಿ, ಸಿಸ್ಟನ್‍ಗಳ ಅಳವಡಿಕೆ, ಹಳೇ ಬೋರ್‍ವೆಲ್‍ಗಳ ದುರಸ್ತಿ ಇತ್ಯಾದಿ ಕೆಲಸಗಳಿಗೆ ಈ ಅನುದಾನದ ಹಣವನ್ನು ಬಳಸಿಕೊಳ್ಳಲಾಗುವುದು ಎಂದ ಅವರು, ನೀರು ಪೂರೈಸುವ ಟ್ಯಾಂಕರ್ ಗಳಿಗೆ ಜಿಪಿಎಸ್ ಅಳವಡಿಸುವುದು ಕಡ್ಡಾಯವಾಗಿದ್ದು, ಜಿಪಿಎಸ್ ಅಳವಡಿಸಲು ಟೆಂಡರ್ ಕರೆಯಲಾಗಿದೆ ಎಂದರು

ಜಿಲ್ಲೆಯ ಬರಪೀಡಿತ ತಾಲೂಕು ವ್ಯಾಪ್ತಿಯಲ್ಲಿ ಮೇವು ಪೂರೈಕೆಗೂ ಕ್ರಮಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 20-25 ಟನ್ ಮೇವು ಸಂಗ್ರಹ ಮಾಡಲಾಗಿದೆ. ಅಗತ್ಯ ಇರುವಲ್ಲಿಗೆ ಮೇವು ಪೂರೈಕೆ ಮಾಡಲಾಗುತ್ತಿದೆ ಎಂದ ಅವರು, ನರೇಗಾ ಯೋಜನೆಯಡಿ 25 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದ್ದು, ಮಾರ್ಚ್ ಕೊನೆಯವರೆಗೆ ಶೇ.100ರಷ್ಟು ಗುರಿ ಸಾಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣ ಹಾಗೂ ಕೊಪ್ಪ ತಾಲೂಕಿನ ಮಣಿಹಡ್ಲು ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಕೆರೆ ನೀಡಿದ್ದರು. ಕಳಸ ಪಟ್ಟಣದಲ್ಲಿ ಮಹಾವೀರ ರಸ್ತೆ ದುರಸ್ತಿಗೆ ಒತ್ತಾಯಿಸಿ ನಾಗರಿಕರು ಮತದಾನ ಬಹಿಷ್ಕಾರ ಮಾಡುವುದಾಗಿ ಕರೆ ನೀಡಿದ್ದರು. ಮಣಿಹಡ್ಲು ಗ್ರಾಮದಲ್ಲಿ ಮೂಲ ಸೌಕರ್ಯಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದರು. ಈ ಎರಡೂ ಸ್ಥಳಗಳಿಗೆ ಸಂಬಂಧಿಸಿದ ತಹಶೀಲ್ದಾರ್ ಗಳು ಭೇಟಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಅಲ್ಲದೇ ಜನರ ಮನವವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮತದಾನ ಜಾಗೃತಿ ಸಂಬಂಧ ಇಸಿಒ ನೇತೃತ್ವದ ತಂಡ ಜಿಲ್ಲೆಯ 1222 ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಿವಿಪ್ಯಾಟ್‍ಗಳ ಪ್ರಾತ್ಯಕ್ಷಿಕೆಯೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮತಗಟ್ಟೆಗಳ ವ್ಯಾಪ್ತಿಯಲ್ಲಿ ಎರಡೆರೆಡು ಬಾರಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News